ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳಿಗೆ ನಾಮನಿರ್ದೇಶನ ಗೊಂಡಿದ್ದ ಅಧ್ಯಕ್ಷರ ಅವಧಿಯನ್ನು ಮುಂದಿನ ಆದೇಶದವರೆಗೆ ವಿಸ್ತರಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ. ಈಗಾಗಲೇ ಅವಧಿ ಮುಕ್ತಾಯಗೊಂಡಿರುವ ಅಥವಾ ಶೀಘ್ರದಲ್ಲೇ ಮುಕ್ತಾಯಗೊಳ್ಳಲಿರುವ ಅಧ್ಯಕ್ಷರಿಗೆ ಈ ಆದೇಶ ಅನ್ವಯವಾಗಲಿದೆ.
ಸರ್ಕಾರದ ವಿವಿಧ ಇಲಾಖೆಗಳ ಅಧೀನದಲ್ಲಿರುವ ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳ ನಾಮನಿರ್ದೇಶಿತ ಅಧ್ಯಕ್ಷರ ಅವಧಿಯನ್ನು ಮುಂದಿನ ಆದೇಶದವರೆಗೆ ಮುಂದುವರಿಸಲಾಗಿದೆ.
ಸಂಬಂಧಿತ ಅಧಿನಿಯಮ ಮತ್ತು ನಿಯಮಾವಳಿಗಳ ಪ್ರಕಾರ ತಕ್ಷಣದಿಂದಲೇ ಅಧ್ಯಕ್ಷರು ಕಾರ್ಯನಿರ್ವಹಿಸಲು ಸೂಕ್ತ ಅಧಿಸೂಚನೆ ಹೊರಡಿಸುವಂತೆ ಆಡಳಿತ ಇಲಾಖೆಗಳಿಗೆ ಸೂಚಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಉಪ ಕಾರ್ಯದರ್ಶಿ ಅಭಿಜಿನ್ ಬಿ. ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ಇದಕ್ಕೂ ಮೊದಲು ಕೆಲವು ಕಾಡಾ ಅಭಿವೃದ್ಧಿ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರದ ಅಧ್ಯಕ್ಷರ ಅವಧಿ ವಿಸ್ತರಣೆಗೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು.
ವಿವಿಧ ಪ್ರಾಧಿಕಾರಗಳ ಅಧ್ಯಕ್ಷರು ಹಾಗೂ ನಿಗಮ-ಮಂಡಳಿಗಳಿಗೆ ಡಿಸಿಸಿ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಮುಖಂಡರನ್ನು ಎರಡು ವರ್ಷದ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ನೇಮಕ ಮಾಡಲಾಗಿತ್ತು. ಫೆಬ್ರವರಿ 7ರ ಆದೇಶದಲ್ಲಿ ಪಟ್ಟಿಯಲ್ಲಿದ್ದ ಕೆಲವರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿ ವಿಸ್ತರಣೆ ನೀಡಲಾಗಿತ್ತು. ಆದರೆ ಕೆಲವು ಕಾಡಾ ಅಭಿವೃದ್ಧಿ ಪ್ರಾಧಿಕಾರ ಮತ್ತು ಯೋಜನಾ ಪ್ರಾಧಿಕಾರದ ಅಧ್ಯಕ್ಷರನ್ನು ಆ ಪಟ್ಟಿಯಿಂದ ಕೈಬಿಡಲಾಗಿತ್ತು.
ಪ್ರಸ್ತುತ ಆ ಪ್ರಾಧಿಕಾರಗಳಿಗೆ ಹೊಸ ಅಧ್ಯಕ್ಷರನ್ನು ನೇಮಕ ಮಾಡದಿರುವುದರಿಂದ, ಮುಂದಿನ ಆದೇಶದವರೆಗೆ ಅಥವಾ ಹೊಸ ನೇಮಕಾತಿ ನಡೆಯುವವರೆಗೆ ಹಾಲಿ ಅಧ್ಯಕ್ಷರನ್ನೇ ಮುಂದುವರಿಸುವಂತೆ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದರು.



