ಬೆಂಗಳೂರು: ಕೆಪಿಎಸ್ಸಿ ನೇಮಕಾತಿ ಹಗರಣದ ಪ್ರಮುಖ ಆರೋಪಿ ಬಸವರಾಜ್ ಕನ್ನಾಳೆ ಅವರನ್ನು ಮತ್ತೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ.
ಮಂಡಿ ನೋವಿನ ಸಮಸ್ಯೆಯಿಂದ ಬಳಲುತ್ತಿರುವುದಾಗಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ಪಡೆದುಕೊಂಡಿದ್ದ ಅವರು, ಇದೀಗ ಚಿಕಿತ್ಸೆಯ ವಿಚಾರದಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿದ್ದಾರೆ.
ಮಂಡಿ ನೋವಿನ ಸಮಸ್ಯೆಗೆ ವೈದ್ಯಕೀಯ ಚಿಕಿತ್ಸೆ ಅಗತ್ಯವಿದೆ ಎಂದು ಬಸವರಾಜ್ ಕನ್ನಾಳೆ ನ್ಯಾಯಾಲಯದ ಮೊರೆ ಹೋಗಿದ್ದರು. ಅರ್ಜಿಯನ್ನು ಪರಿಶೀಲಿಸಿದ್ದ ನ್ಯಾಯಾಲಯ, 48 ಗಂಟೆಗಳ ಒಳಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿತ್ತು. ಈ ಆದೇಶದಂತೆ ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಸಂಬಂಧ ಕನ್ನಾಳೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಜೈಲಾಧಿಕಾರಿಗಳು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ. ಈ ವರದಿಯ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಿ ಮತ್ತೆ ಜೈಲಿಗೆ ಸ್ಥಳಾಂತರಿಸಲಾಗಿದೆ.
ಕೆಪಿಎಸ್ಸಿ ನೇಮಕಾತಿ ಹಗರಣದಲ್ಲಿ ಬಸವರಾಜ್ ಕನ್ನಾಳೆ ಪ್ರಮುಖ ಆರೋಪಿ ಹಾಗೂ ಮಧ್ಯವರ್ತಿಯಾಗಿ ಗುರುತಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಮತ್ತು ವಿಶೇಷ ತನಿಖಾ ತಂಡ (SIT) ತನಿಖೆ ಮುಂದುವರಿಸಿವೆ. ಈಗಾಗಲೇ ಇಡಿ ಚಾರ್ಜ್ಶೀಟ್ ಸಲ್ಲಿಸಿದ್ದು, ಕೆಪಿಎಸ್ಸಿಯ ವಿವಿಧ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳ ಬಗ್ಗೆಯೂ ತನಿಖೆ ನಡೆಸುವಂತೆ ನ್ಯಾಯಾಲಯ ಸೂಚಿಸಿದೆ.









