ಕೊಪ್ಪಳ: ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿಯವರ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ.
ಶನಿವಾರ ಸಂಜೆ ಸಾಮಾಜಿಕ ಜಾಲತಾಣದಲ್ಲಿ, “ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿಯವರು ಮೈಸೂರು ದಸರಾ ಉದ್ಘಾಟನೆಯನ್ನು ತಿರಸ್ಕರಿಸಿದ್ದಾರೆ” ಎಂಬ ಪೋಸ್ಟ್ ವೈರಲ್ ಆಗಿತ್ತು. ಆದರೆ ಈ ಮಾಹಿತಿ ಆಧಾರರಹಿತವಾಗಿದ್ದು, ಸಾರ್ವಜನಿಕರಲ್ಲಿ ಗೊಂದಲ ಮೂಡಿಸುವ ಉದ್ದೇಶದಿಂದ ಹರಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ವಿಚಾರ ಗಮನಕ್ಕೆ ಬರುತ್ತಿದ್ದಂತೆ ಕೊಪ್ಪಳ ನಗರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸುರೇಶ್ ಡಿ. ಅವರು ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹರಡುವುದು ಹಾಗೂ ಸಾಮಾಜಿಕ ಸ್ವಾಸ್ಥ್ಯಕ್ಕೆ ಧಕ್ಕೆ ತರುವಂತಹ ಪೋಸ್ಟ್‌ಗಳನ್ನು ಪ್ರಕಟಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.



