ಹೈದರಾಬಾದ್: ಕೌಟುಂಬಿಕ ಕಲಹದಿಂದ ಬೇಸತ್ತ 27 ವರ್ಷದ ಮಹಿಳೆಯೊಬ್ಬಳು ತನ್ನ 10 ತಿಂಗಳ ಮಗನಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ತಾಯಿ–ಮಗು ಸಾವಿನ ಆಘಾತದಿಂದ ಮಗುವಿನ ಅಜ್ಜಿ ಕೂಡ ಆತ್ಮಹತ್ಯೆಗೆ ಯತ್ನಿಸಿರುವುದು ತಿಳಿದುಬಂದಿದೆ.
ಮೃತ ಮಹಿಳೆಯನ್ನು ಸುಷ್ಮಾ (27) ಎಂದು ಗುರುತಿಸಲಾಗಿದೆ. ನಾಲ್ಕು ವರ್ಷಗಳ ಹಿಂದೆ ಚಾರ್ಟರ್ಡ್ ಅಕೌಂಟೆಂಟ್ ಯಶವಂತ್ ರೆಡ್ಡಿ ಅವರನ್ನು ವಿವಾಹವಾಗಿದ್ದ ಸುಷ್ಮಾ, ಇತ್ತೀಚಿನ ದಿನಗಳಲ್ಲಿ ಪತಿಯೊಂದಿಗೆ ಆಗಾಗ ಜಗಳವಾಗುತ್ತಿತ್ತು ಎಂದು ಕುಟುಂಬದವರು ಪೊಲೀಸರಿಗೆ ತಿಳಿಸಿದ್ದಾರೆ.
ಕಾರ್ಯಕ್ರಮವೊಂದಕ್ಕೆ ಸಂಬಂಧಿಸಿದ ಶಾಪಿಂಗ್ ನೆಪದಲ್ಲಿ ಸುಷ್ಮಾ ತನ್ನ ತಾಯಿ ಲಲಿತಾ (44) ಮನೆಗೆ ಮಗುವಿನೊಂದಿಗೆ ತೆರಳಿದ್ದರು. ಅಲ್ಲಿ ಮತ್ತೊಂದು ಕೋಣೆಗೆ ಹೋಗಿ, ಮಗುವಿಗೆ ವಿಷ ನೀಡಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಪತಿ ಕೆಲಸ ಮುಗಿಸಿ ಮನೆಗೆ ಬಂದಾಗ ಕೋಣೆ ಒಳಗಿನಿಂದ ಲಾಕ್ ಆಗಿರುವುದನ್ನು ಕಂಡು ಬಾಗಿಲು ಒಡೆದು ಒಳಗೆ ಪ್ರವೇಶಿಸಿದ್ದಾರೆ. ಈ ವೇಳೆ ಸುಷ್ಮಾ ಮತ್ತು ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿ ಕಂಡುಬಂದಿದ್ದು, ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ವೈದ್ಯರು ಇಬ್ಬರೂ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.
ಈ ಘಟನೆ ಕಂಡು ತಾಯಿ ಲಲಿತಾ ತೀವ್ರ ಆಘಾತಕ್ಕೆ ಒಳಗಾಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



