ಎಫ್‌ಎಕ್ಯೂ ಗುಣಮಟ್ಟದ ಉದ್ದಿನಕಾಳು ಖರೀದಿಗೆ ಬೆಂಬಲ ಬೆಲೆ ನಿಗದಿ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: 2025-26ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಎಫ್.ಎ.ಕ್ಯೂ ಗುಣಮಟ್ಟದ ಉದ್ದಿನಕಾಳು ಖರೀದಿಸಲು ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.

Advertisement

ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ 2025-26ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಉದ್ದಿನಕಾಳು ಹುಟ್ಟುವಳಿ ಖರೀದಿಸುವ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಪ್ರತಿ ರೈತರಿಂದ ಪ್ರತಿ ಎಕರೆಗೆ 5 ಕ್ವಿಂಟಲ್‌ನಂತೆ ಗರಿಷ್ಠ 30 ಕ್ವಿಂಟಲ್ ಎಫ್.ಎ.ಕ್ಯೂ ಗುಣಮಟ್ಟದ ಉದ್ದಿನಕಾಳು ಖರೀದಿಸಲು ಹಾಗೂ ಉದ್ದಿನಕಾಳು ಖರೀದಿ ಕೇಂದ್ರಗಳಲ್ಲಿ ರೈತರ ಹೆಸರಿನಲ್ಲಿ ವರ್ತಕರು ತರುವ ಉದ್ದಿನಕಾಳು ಉತ್ಪನ್ನವನ್ನು ಖರೀದಿಸದಂತೆ ಹಾಗೂ ಖರೀದಿ ಸಂಸ್ಥೆಗಳು ಯಾವುದೇ ರೀತಿಯ ದುರುಪಯೋಗವಾಗದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಿದರು.

ಸರ್ಕಾರದ ಮಾನದಂಡಗಳನ್ವಯ ಎಫ್.ಎ.ಕ್ಯೂ ಗುಣಮಟ್ಟವನ್ನು ದೃಢೀಕರಿಸಲು ಕ್ರಮ ವಹಿಸಬೇಕು. ಉದ್ದಿನಕಾಳು ಎಫ್.ಎ.ಕ್ಯೂ ಪ್ರಕ್ರಿಯೆಯಲ್ಲಿ ಎಫ್.ಎ.ಕ್ಯೂ ಗುಣಮಟ್ಟ ಪರಿಶೀಲನೆಗಾಗಿ ಲಭ್ಯವಿರುವ ಅಧಿಕಾರಿ/ಸಿಬ್ಬಂದಿಗಳನ್ನು ಬಳಸಿಕೊಳ್ಳುವುದು. ತರಬೇತಿ ಅವಶ್ಯವಿದ್ದರೆ ಅಂತಹ ಸಿಬ್ಬಂದಿಗಳಿಗೆ ಎಫ್.ಎ.ಕ್ಯೂ ಗ್ರೇಡಿಂಗ್ ತರಬೇತಿ ನೀಡಲು ಖರೀದಿ ಸಂಸ್ಥೆಗಳು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.

ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕಿ ಸುಧಾ ಬಂಡಿ ಮಾತನಾಡಿ, ಎಫ್.ಎ.ಕ್ಯೂ ಗುಣಮಟ್ಟದ ಉದ್ದಿನಕಾಳು ಉತ್ಪನ್ನಕ್ಕೆ ಪ್ರತಿ ಕ್ವಿಂಟಾಲ್‌ಗೆ ರೂ. 7800ರಂತೆ ನಿಗದಿಪಡಿಸಲಾಗಿದೆ. ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಗಳನ್ವಯ ರಾಜ್ಯದಲ್ಲಿ ನಾಫೆಡ್ ಹಾಗೂ ಎನ್‌ಸಿಸಿಎಫ್ ಸಂಸ್ಥೆಯನ್ನು ಕೇಂದ್ರ ಸರ್ಕಾರದ ಖರೀದಿ ಸಂಸ್ಥೆಯನ್ನಾಗಿ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ ಬೆಂಗಳೂರು ಇವರನ್ನು ರಾಜ್ಯ ಮಟ್ಟದ ಖರೀದಿ ಏಜೆನ್ಸಿಯನ್ನಾಗಿ ನೇಮಿಸಿದೆ. ಆದೇಶ ಹೊರಡಿಸಿದ ದಿನಾಂಕದಿಂದ ರೈತರ ನೋಂದಣಿ ಕಾಲಾವಧಿಯನ್ನು 80 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 90 ದಿನಗಳವರೆಗೆ ನಿಗದಿಪಡಿಸಲಾಗಿದೆ ಎಂದು ಸಭೆಗೆ ತಿಳಿಸಿದರು.
ಸಭೆಯಲ್ಲಿ ಕೃಷಿ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಕಾನೂನು ಮಾಪನ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಖರೀದಿ ಕೇಂದ್ರಗಳ ವಿವರ
ಗದಗ ತಾಲೂಕಿನಲ್ಲಿ ಟಿಎಪಿಸಿಎಂಎಸ್ ಗದಗ, ಶಿರಹಟ್ಟಿ ತಾಲೂಕಿನಲ್ಲಿ ಟಿಎಪಿಸಿಎಂಎಸ್ ಶಿರಹಟ್ಟಿ, ಲಕ್ಷ್ಮೇಶ್ವರ ತಾಲೂಕಿನಲ್ಲಿ ಟಿಎಪಿಸಿಎಂಎಸ್ ಲಕ್ಷ್ಮೇಶ್ವರ, ಮುಂಡರಗಿ ತಾಲೂಕಿನಲ್ಲಿ ಟಿಎಪಿಸಿಎಂಎಸ್ ಮುಂಡರಗಿ, ನರಗುಂದ ತಾಲೂಕಿನಲ್ಲಿ ಟಿಎಪಿಸಿಎಂಎಸ್ ನರಗುಂದ, ರೋಣ ತಾಲೂಕಿನಲ್ಲಿ ಟಿಎಪಿಸಿಎಂಎಸ್ ರೋಣ, ಗಜೇಂದ್ರಗಡ ತಾಲೂಕಿನಲ್ಲಿ ಟಿಎಪಿಸಿಎಂಎಸ್ ಗಜೇಂದ್ರಗಡ.


Spread the love

LEAVE A REPLY

Please enter your comment!
Please enter your name here