ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ಹೊನ್ನೇನಹಳ್ಳಿ ಗ್ರಾಮದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ರೈತರೊಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು 60 ವರ್ಷದ ರಂಗಶಾಮಣ್ಣ ಎಂದು ಗುರುತಿಸಲಾಗಿದೆ. ರಂಗಶಾಮಣ್ಣ ಅವರು ಎಂದಿನಂತೆ ಕೃಷಿ ಚಟುವಟಿಕೆಗಾಗಿ ತಮ್ಮ ಜಮೀನಿಗೆ ತೆರಳುತ್ತಿದ್ದರು. ಈ ವೇಳೆ ವಿದ್ಯುತ್ ತಂತಿಯೊಂದು ತುಂಡಾಗಿ ನೆಲಕ್ಕೆ ಬಿದ್ದಿತ್ತು. ಇದನ್ನು ಗಮನಿಸದೆ ರಂಗಶಾಮಣ್ಣ ಅವರು ವಿದ್ಯುತ್ ತಂತಿಯನ್ನು ಸ್ಪರ್ಶಿಸಿದ್ದಾರೆ. ತಕ್ಷಣ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವಿದ್ಯುತ್ ತಂತಿಗಳ ನಿರ್ವಹಣೆಯಲ್ಲಿ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ವಿದ್ಯುತ್ ತಂತಿಗಳ ನಿರ್ವಹಣೆ ಹಾಗೂ ಸುರಕ್ಷತೆ ಬಗ್ಗೆ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಘಟನಾ ಸ್ಥಳಕ್ಕೆ ಶಿರಾ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



