ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಸಮರ್ಪಕ ಮಳೆಯ ಕೊರತೆಯಿಂದ ಬಿತ್ತನೆ ಮಾಡಿದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಶಿರಹಟ್ಟಿ ತಾಲೂಕನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ಬಿಜೆಪಿ ಮುಖಂಡರಾದ ಶಿವಪ್ರಕಾಶ ಮಹಾಜನಶೆಟ್ಟರ ಹಾಗೂ ವಿಶ್ವನಾಥ ಕಪ್ಪತ್ತನವರ ಆಗ್ರಹಿಸಿದರು.
ಸಮರ್ಪಕ ಮಳೆಯ ಕೊರತೆಯಿಂದ ಬಿತ್ತನೆ ಮಾಡಿದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಶಿರಹಟ್ಟಿ ತಾಲೂಕನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ಬಿಜೆಪಿ ಮುಖಂಡರಾದ ಶಿವಪ್ರಕಾಶ ಮಹಾಜನಶೆಟ್ಟರ ಹಾಗೂ ವಿಶ್ವನಾಥ ಕಪ್ಪತ್ತನವರ ಆಗ್ರಹಿಸಿದರು.
ಸೋಮವಾರ ಪಟ್ಟಣದ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕಿನ ಸುಮಾರು 30ರಿಂದ 35 ಸಾವಿರ ಹೆಕ್ಟೇರ್ ಮಳೆಯಾಶ್ರಿತ ಪ್ರದೇಶದಲ್ಲಿ ಈಗಾಗಲೇ ಬಹುತೇಕ ರೈತರು ಬಿತ್ತನೆ ಪೂರ್ಣಗೊಳಿಸಿದ್ದಾರೆ. ಆದರೆ ಕಳೆದ ಒಂದು ತಿಂಗಳಿಂದ ಸಮರ್ಪಕ ಮಳೆಯಾಗದ ಕಾರಣ ಬೆಳೆ ಉಳಿಯುವ ಬಗ್ಗೆ ರೈತರು ಆತಂಕದಲ್ಲಿದ್ದಾರೆ ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ಕೂಡ ಶಿರಹಟ್ಟಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ ಎಂದು ಅವರು ತಿಳಿಸಿದರು.
ರೈತರಿಗೆ ಎಫ್‌ಐಡಿ ಆಧಾರದಲ್ಲಿ ಮಾತ್ರ ಗೊಬ್ಬರ ವಿತರಿಸುತ್ತಿರುವುದರಿಂದ ಅನೇಕ ತೊಂದರೆಗಳು ಉಂಟಾಗುತ್ತಿವೆ. ಬಿತ್ತನೆಗೆ ಅನುಗುಣವಾಗಿ ಸಮರ್ಪಕ ಗೊಬ್ಬರ ಪೂರೈಕೆ ಮಾಡಬೇಕು. ಕೃಷಿ ಇಲಾಖೆಯ ಅಧಿಕಾರಿಗಳು ಬೆಳೆ ವಿಮೆ ಕುರಿತು ರೈತರಿಗೆ ಸಮರ್ಪಕ ಮಾಹಿತಿ ನೀಡಿ ಜಾಗೃತಿ ಮೂಡಿಸಬೇಕು ಎಂದು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಪಂ ಮಾಜಿ ಸದಸ್ಯ ಎಂ.ಎಸ್. ದೊಡ್ಡಗೌಡರ, ತಿಪ್ಪಣ್ಣ ಕೊಂಚಿಗೇರಿ, ಸಂದೀಪ ಕಪ್ಪತ್ತನವರ, ನಿಂಬಣ್ಣ ಮಡಿವಾಳರ, ರಮೇಶ ಭರಮಗೌಡ್ರ, ಚನ್ನವೀರಪ್ಪ ಹೂಗಾರ, ಮಹೇಶ ಮತ್ತೂರ ಸೇರಿದಂತೆ ಹಲವರು ಉಪಸ್ಥಿತರಿದ್ದರು.



