ಬೆಂಗಳೂರು: ಕಬ್ಬಿಗೆ ಪ್ರತಿ ಟನ್ಗೆ ₹5,500 ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರಾಜ್ಯದ ಕಬ್ಬು ಬೆಳೆಗಾರರು ನಡೆಸುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ.
ಕಳೆದ 15 ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆ ಇದೀಗ ಕರ್ನಾಟಕ ಬಂದ್ ರೂಪ ಪಡೆದಿದ್ದು, ಬೆಳಗಾವಿ, ಬಾಗಲಕೋಟೆ, ಹಾವೇರಿ, ಚಿಕ್ಕೋಡಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ರೈತರು ರಸ್ತೆಗಿಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸುವುದಾಗಿ ರಾಜ್ಯ ರೈತ ಸಂಘ ಘೋಷಿಸಿದ್ದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಡಳಿತ ಹೆದ್ದಾರಿ ತಡೆಗೆ ಅವಕಾಶ ನೀಡದಂತೆ ಆದೇಶ ಹೊರಡಿಸಿತ್ತು. ಹೀಗಾಗಿ ಎನ್ಎಚ್-4 ಬಂದ್ ಮಾಡುವ ನಿರ್ಧಾರದಿಂದ ಹಿಂದೆ ಸರಿದ ಪ್ರತಿಭಟನಾಕಾರರು ಕರ್ನಾಟಕ ಬಂದ್ಗೆ ಕರೆ ನೀಡಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ 27 ಕಡೆಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಬೆಳಗಾವಿ, ಅಥಣಿಯಲ್ಲಿ ರಸ್ತೆ ತಡೆ:
ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ರೈತ ಮುಖಂಡರು ಬಸ್ಗಳನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ. ಇತ್ತ ಅಥಣಿ ಪಟ್ಟಣದ ಅಂಬೇಡ್ಕರ್ ಸರ್ಕಲ್ನಲ್ಲಿ ರೈತರು ಪ್ರತಿಭಟನೆ ನಡೆಸಿ ಸಂಕೇಶ್ವರ–ಜೇವರ್ಗಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆದಿದ್ದಾರೆ. ಪಟ್ಟಣ ಹಾಗೂ ಗ್ರಾಮೀಣ ಭಾಗದಲ್ಲೂ ಪ್ರತಿಭಟನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ವ್ಯಾಪಾರಸ್ಥರು ಸ್ವಯಂಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿದ್ದಾರೆ. ಗ್ರಾಮೀಣ ಭಾಗಗಳಿಗೆ ತೆರಳುವ ಬಸ್ಗಳಿಗೂ ರೈತರು ಅಡ್ಡಗಟ್ಟಿದ್ದು, ಸಂಚಾರ ವ್ಯವಸ್ಥೆಯಲ್ಲಿ ವ್ಯತ್ಯಯ ಉಂಟಾಗಿದೆ.
ಬೀಳಗಿ ಕ್ರಾಸ್ನಲ್ಲಿ ಕಲ್ಲು, ಮುಳ್ಳು ಹಾಕಿ ಪ್ರತಿಭಟನೆ
ಬಾಗಲಕೋಟೆ ಜಿಲ್ಲೆಯ ಬೀಳಗಿ ಕ್ರಾಸ್ನಲ್ಲಿ ರೈತರು ಹೆದ್ದಾರಿಗೆ ಅಡ್ಡಲಾಗಿ ಕಲ್ಲು ಮತ್ತು ಮುಳ್ಳುಗಳನ್ನು ಹಾಕಿ, ಟ್ರ್ಯಾಕ್ಟರ್ಗಳನ್ನು ನಿಲ್ಲಿಸಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪೊಲೀಸರೊಂದಿಗೆ ರೈತರು ವಾಗ್ವಾದ ನಡೆಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಬಾಗಲಕೋಟೆ ಎಸ್ಪಿ ಸಿದ್ಧಾರ್ಥ ಗೋಯಲ್ ಪ್ರತಿಭಟನಾಕಾರರ ಮನವೊಲಿಸಲು ಪ್ರಯತ್ನಿಸಿದ್ದಾರೆ.
ಹಾವೇರಿಯಲ್ಲಿ ಅರೆಬೆತ್ತಲೆ ಪ್ರತಿಭಟನೆ:
ಹಾವೇರಿ ಜಿಲ್ಲೆಯಲ್ಲೂ ಕಬ್ಬು ಬೆಳೆಗಾರರ ಹೋರಾಟ ತೀವ್ರಗೊಂಡಿದೆ. ಕಂಚಾರಗಟ್ಟಿ ಕ್ರಾಸ್ ಬಳಿ ರಾಜ್ಯ ಹೆದ್ದಾರಿ ಬಂದ್ ಮಾಡಿದ ರೈತರು ಮೊಳಕಾಲ್ಮೂರು–ಶಿರಸಿ ರಸ್ತೆಯಲ್ಲಿ ಸಂಚಾರ ತಡೆದು ಪ್ರತಿಭಟನೆ ನಡೆಸಿದ್ದಾರೆ. ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಕೆಲ ರೈತರು ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದಾರೆ.
ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲವು ಕಡೆಗಳಲ್ಲಿ ರೈತ ಮುಖಂಡರು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಿದ್ದಾರೆ. ಶಾಲಾ-ಕಾಲೇಜು ವಿದ್ಯಾರ್ಥಿಗಳೂ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ಧಾರವಾಡ ತಾಲೂಕಿನ ನಿಗದಿ ಗ್ರಾಮದಲ್ಲೂ ರಸ್ತೆ ತಡೆದು ಪ್ರತಿಭಟನೆ ನಡೆಸಲಾಗಿದೆ.
ಚಿಕ್ಕೋಡಿ ಉಪವಿಭಾಗದಲ್ಲಿ ಬಂದ್ಗೆ ಭಾರಿ ಬೆಂಬಲ:
ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯಲ್ಲಿ ಕರ್ನಾಟಕ ಬಂದ್ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ವಿವಿಧೆಡೆ ರಾಜ್ಯ ಹೆದ್ದಾರಿಗಳನ್ನು ತಡೆದು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ. ಹಲವು ಕಡೆ ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಅಂಗಡಿ ಮುಂಗಟ್ಟುಗಳು ಬಹುತೇಕ ಬಂದ್ ಆಗಿದ್ದು, ವ್ಯಾಪಾರ ವಹಿವಾಟಿನ ಮೇಲೂ ಬಂದ್ ಪರಿಣಾಮ ಬೀರಿದೆ. ಗ್ರಾಮೀಣ ಪ್ರದೇಶಗಳಲ್ಲೂ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಒಟ್ಟಿನಲ್ಲಿ, ಕಬ್ಬಿಗೆ ಪ್ರತಿ ಟನ್ಗೆ ₹5,500 ಬೆಲೆ ನಿಗದಿಪಡಿಸಬೇಕೆಂಬ ಬೇಡಿಕೆಯೊಂದಿಗೆ ರೈತರ ಹೋರಾಟ ರಾಜ್ಯಾದ್ಯಂತ ತೀವ್ರಗೊಂಡಿದೆ. ಸರ್ಕಾರ ರೈತರ ಬೇಡಿಕೆಗೆ ಯಾವ ರೀತಿಯಲ್ಲಿ ಸ್ಪಂದಿಸಲಿದೆ ಎಂಬುದನ್ನು ಕಾದುನೋಡಬೇಕಿದೆ.










