ಆನೇಕಲ್: ಬೆಂಗಳೂರು–ಚೆನ್ನೈ ರಾಷ್ಟ್ರೀಯ ಹೆದ್ದಾರಿಯ ಚಂದಾಪುರ ಫ್ಲೈಓವರ್ ಮೇಲೆ ಎರಡು ಸ್ಲೀಪರ್ ಕೋಚ್ ಬಸ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಚೆನ್ನೈ ಕಡೆಗೆ ತೆರಳುತ್ತಿದ್ದ ಎರಡು ಸ್ಲೀಪರ್ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ.
ಮುಂಭಾಗದಲ್ಲಿ ಸಾಗುತ್ತಿದ್ದ ಬಸ್‌ಗೆ ಹಿಂಬದಿಯಿಂದ ಮತ್ತೊಂದು ಬಸ್ ಡಿಕ್ಕಿ ಹೊಡೆದಿದ್ದು, ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣವಾಗಿರಬಹುದೆಂದು ಶಂಕಿಸಲಾಗಿದೆ. ಈ ಅಪಘಾತದಲ್ಲಿ ಎರಡೂ ಬಸ್‌ಗಳು ಸಂಪೂರ್ಣವಾಗಿ ಜಖಂಗೊಂಡಿವೆ.
ಘಟನೆಯಲ್ಲಿ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ನಾಲ್ವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದ ಹಿನ್ನೆಲೆ ಬೆಂಗಳೂರು–ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಸಂಚಾರವನ್ನು ಸುಗಮಗೊಳಿಸಿದರು. ಪ್ರಕರಣವು ಸೂರ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.



