ಶಿಮ್ಲಾ: ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ಮಂದಿ ಮೃತಪಟ್ಟಿರುವ ದಾರುಣ ಘಟನೆ ವರದಿಯಾಗಿದೆ. ಚುರಾಹ್ ಉಪವಿಭಾಗದ ಬೈರಗಢ್–ಸಚ್ ಪಾಸ್–ಕಿಲ್ಲರ್ ಮಾರ್ಗದಲ್ಲಿ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಕಾರು ನಿಯಂತ್ರಣ ತಪ್ಪಿ ಸುಮಾರು 500 ಮೀಟರ್ ಆಳದ ಕಂದಕಕ್ಕೆ ಉರುಳಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಅಧಿಕಾರಿಗಳ ಪ್ರಕಾರ, ಹಿಮದಿಂದ ಆವೃತವಾಗಿರುವ ಸಚ್ ಪಾಸ್ ಪ್ರದೇಶದತ್ತ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಎಂಟು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿಯ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ.
ಪ್ರಾಥಮಿಕ ಮಾಹಿತಿಯಂತೆ, ಬೆಂಗಳೂರಿನಿಂದ ಬಂದಿದ್ದ ಒಂದು ಕುಟುಂಬ ಡಲ್‌ಹೌಸಿ ಪ್ರವಾಸಕ್ಕಾಗಿ ಟ್ಯಾಕ್ಸಿಯನ್ನು ಬಾಡಿಗೆಗೆ ಪಡೆದಿತ್ತು. ಬಳಿಕ ಡಲ್‌ಹೌಸಿಯಲ್ಲಿ ತಂಗಿದ್ದ ಮತ್ತೊಂದು ಪ್ರವಾಸಿ ಕುಟುಂಬದೊಂದಿಗೆ ಸೇರಿ ಸಚ್ ಪಾಸ್‌ನ ಹಿಮಾಚ್ಛಾದಿತ ಪ್ರದೇಶಗಳನ್ನು ವೀಕ್ಷಿಸಲು ತೆರಳಿದ್ದರು. ಚಾಲಕ ಸೇರಿದಂತೆ ವಾಹನದಲ್ಲಿ ಒಟ್ಟು ಒಂಬತ್ತು ಮಂದಿ ಪ್ರಯಾಣಿಸುತ್ತಿದ್ದು, ಅವರಲ್ಲಿ ಇಬ್ಬರು ಮಕ್ಕಳು ಕೂಡ ಇದ್ದರು ಎಂದು ತಿಳಿದುಬಂದಿದೆ.
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ಭೀಕರ ದೃಶ್ಯ ನಿರ್ಮಾಣವಾಗಿತ್ತು. ಘಟನೆ ನಡೆದ ಪ್ರದೇಶ ದುರ್ಗಮ ಹಾಗೂ ಕಡಿದಾದ ಇಳಿಜಾರುಗಳನ್ನು ಹೊಂದಿರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ಅಡಚಣೆ ಉಂಟಾಗಿದೆ.
ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸ್ ಹಾಗೂ ಆಡಳಿತಾಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಚಂಬಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಜಯ್ ಕುಮಾರ್ ಸಕ್ಲಾನಿ ಅಪಘಾತವನ್ನು ದೃಢಪಡಿಸಿದ್ದು, ಮೃತದೇಹಗಳನ್ನು ಹೊರತೆಗೆದು ಗುರುತಿಸುವ ಕಾರ್ಯ ಮುಂದುವರಿದಿದೆ ಎಂದು ತಿಳಿಸಿದ್ದಾರೆ.



