ನೆಲಮಂಗಲ: ಚಾಲಕನ ನಿಯಂತ್ರಣ ತಪ್ಪಿ ಥಾರ್ ಜೀಪ್ ಪಲ್ಟಿಯಾದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಕಂಬಾಳು ಗ್ರಾಮದ ಬಳಿ ನಡೆದಿದೆ.
ಮೃತರನ್ನು ಪವನ್ ಮತ್ತು ದೀಪಕ್ ಎಂದು ಗುರುತಿಸಲಾಗಿದೆ. ಸ್ನೇಹಿತನ ಹುಟ್ಟುಹಬ್ಬದ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಕಂಬಾಳು ಗ್ರಾಮದ ಕೆರೆಯ ರಸ್ತೆಯಲ್ಲಿ ತೆರಳುತ್ತಿದ್ದ ಥಾರ್ ಜೀಪ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗದ್ದೆಗೆ ಬಿದ್ದಿದೆ. ಬಳಿಕ ಜೀಪ್ ನಾಲ್ಕೈದು ಬಾರಿ ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅತಿವೇಗವೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದ್ದು, ಡಾಬಸ್‌ಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.



