ಮಂಡ್ಯ: ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಮತ್ತೊಂದು ಕಾರು ಅತೀವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ತಾವರೆಕೆರೆ ಗೇಟ್ ಸಮೀಪದ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
ಗುಜರಾತ್ ಮೂಲದ ಹಾಗೂ ಬೆಂಗಳೂರಿನ ನಿವಾಸಿಯಾಗಿದ್ದ ಸುಧಾ ಜೈನ್ (58) ಮೃತ ಮಹಿಳೆ. ಕುಟುಂಬ ಸಮೇತ ಶ್ರವಣಬೆಳಗೊಳದಿಂದ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದ ವೇಳೆ, ಹಿಂದಿನಿಂದ ಬಂದ ಮತ್ತೊಂದು ಕಾರು ಓವರ್‌ಟೇಕ್ ಮಾಡುವ ಭರದಲ್ಲಿ ಅತೀವೇಗವಾಗಿ ಬಂದು ಸ್ವಿಫ್ಟ್ ಡಿಸೈರ್ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಸುಧಾ ಜೈನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದ ವೇಳೆ ರಸ್ತೆ ಬದಿ ಕೆಲಸ ಮಾಡುತ್ತಿದ್ದ ಪೆಟ್ರೋಲ್ ಬಂಕ್ ಮಾಲೀಕರಿಗೂ ಕಾಲಿಗೆ ಗಂಭೀರ ಗಾಯವಾಗಿದ್ದು, ಗಾಯಾಳುಗಳನ್ನು ಬಿ.ಜಿ.ನಗರದ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಭೀಕರ ಅಪಘಾತದ ದೃಶ್ಯ ಮತ್ತೊಂದು ಕಾರಿನ ಡ್ಯಾಶ್‌ಬೋರ್ಡ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಪಘಾತದ ಬಳಿಕ ಕಾರನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.
ಘಟನೆ ಸಂಬಂಧ ಬೆಳ್ಳೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಎರಡೂ ಕಾರುಗಳನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ. ಮೃತ ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ರವಾನಿಸಲಾಗಿದೆ.

