HomeIndia Newsಹಿಮಾಚಲ ಪ್ರದೇಶದಲ್ಲಿ ಭೀಕರ ಬಸ್ ಅಪಘಾತ; ಚಾಲಕ-ಕಂಡಕ್ಟರ್ ಸೇರಿ 8 ಮಂದಿ ಸಾವು, 6 ಜನರ...

ಹಿಮಾಚಲ ಪ್ರದೇಶದಲ್ಲಿ ಭೀಕರ ಬಸ್ ಅಪಘಾತ; ಚಾಲಕ-ಕಂಡಕ್ಟರ್ ಸೇರಿ 8 ಮಂದಿ ಸಾವು, 6 ಜನರ ಸ್ಥಿತಿ ಗಂಭೀರ

ಶಿಮ್ಲಾ: ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಖಾಸಗಿ ಬಸ್‌ವೊಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕೆಳಗಿನ ರಸ್ತೆಗೆ ಬಿದ್ದ ಪರಿಣಾಮ ಚಾಲಕ ಮತ್ತು ಕಂಡಕ್ಟರ್ ಸೇರಿದಂತೆ 8 ಮಂದಿ ಮೃತಪಟ್ಟಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರ ಪೈಕಿ 6 ಜನರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಸ್‌ ಇಂದು ಬೆಳಗ್ಗೆ ಬೈರಾಗರ್‌ನಿಂದ ಚಂಬಾ ಕಡೆಗೆ ತೆರಳುತ್ತಿತ್ತು. ಬೈರಾಗರ್-ಟಿಸ್ಸಾ ಮಾರ್ಗದ ದೇವಿಕೋಥಿ ಪ್ರದೇಶದ ಚಲುಂಜ್ ಮೋರ್ ಬಳಿ ಬಸ್‌ ಪಲ್ಟಿಯಾಗಿದೆ. ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಬಸ್‌ನಲ್ಲಿ ಒಟ್ಟು 18 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.

ಬಸ್‌ ನಿಯಂತ್ರಣ ಕಳೆದುಕೊಂಡು ಕೆಳಗಿನ ರಸ್ತೆಗೆ ಉರುಳಿ ಬಿದ್ದಿದ್ದು, ಕೆಲವು ಪ್ರಯಾಣಿಕರು ಬಸ್‌ನ ಅಡಿಯಲ್ಲಿ ಸಿಲುಕಿಕೊಂಡು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತದ ಬಳಿಕ ಗಾಯಾಳುಗಳ ಚೀರಾಟ ಕೇಳಿದ ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ಲಭ್ಯವಾಗುತ್ತಿದ್ದಂತೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ತಂಡಗಳು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ. ಬಸ್‌ನ್ನು ಮೇಲಕ್ಕೆತ್ತಿ ಅದರ ಅಡಿಯಲ್ಲಿ ಸಿಲುಕಿದ್ದವರನ್ನು ಹೊರತೆಗೆಯಲಾಗಿದ್ದು, ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದಲ್ಲಿ ಮೃತಪಟ್ಟವರ ಗುರುತುಗಳನ್ನು ಅಧಿಕಾರಿಗಳು ಇನ್ನೂ ಅಧಿಕೃತವಾಗಿ ಬಹಿರಂಗಪಡಿಸಿಲ್ಲ. ಬಸ್‌ ಅಪಘಾತಕ್ಕೆ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಪೊಲೀಸರು ಹಾಗೂ ಸಂಬಂಧಿತ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

ಭೀಕರ ಅಪಘಾತದ ಸುದ್ದಿ ತಿಳಿದ ಬಳಿಕ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳಿಗೆ ಅಗತ್ಯ ಹಾಗೂ ಸೂಕ್ತ ವೈದ್ಯಕೀಯ ಚಿಕಿತ್ಸೆ ದೊರೆಯುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.

ಇದರ ನಡುವೆ ಹಿಮಾಚಲ ಪ್ರದೇಶದಲ್ಲಿ ಧಾರಾಕಾರ ಮಳೆಯ ಪರಿಣಾಮ ಜನಜೀವನವೂ ಅಸ್ತವ್ಯಸ್ತಗೊಂಡಿದೆ. ರಾಜ್ಯದ ವಿವಿಧೆಡೆ 185 ರಸ್ತೆಗಳು ಬಂದ್ ಆಗಿವೆ ಎಂದು ವರದಿಯಾಗಿದೆ. ಶಿಮ್ಲಾ ಹವಾಮಾನ ಇಲಾಖೆ, ಆಗಸ್ಟ್ 10 ಮತ್ತು 11ರಂದು ರಾಜ್ಯದ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಹೀಗಾಗಿ ಗುಡ್ಡಗಾಡು ಪ್ರದೇಶಗಳಲ್ಲಿ ಸಂಚರಿಸುವವರು ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img