ಚಿಕ್ಕಬಳ್ಳಾಪುರ: ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ-44ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ.
ಚಿಕ್ಕಬಳ್ಳಾಪುರ ತಾಲೂಕಿನ ದೊಡ್ಡಪೈಲಗುರ್ಕಿ ಬಳಿ ಮುಂಜಾನೆ ಈ ಘಟನೆ ನಡೆದಿದೆ.
ಕರ್ನೂಲಿನಿಂದ ಬೆಂಗಳೂರಿಗೆ ಬರುತ್ತಿದ್ದ ಆಂಧ್ರಪ್ರದೇಶ ರಸ್ತೆ ಸಾರಿಗೆ ಸಂಸ್ಥೆಯ (APSRTC) ಬಸ್, ಮುಂದೆ ಸಾಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.
ಘಟನೆಯಲ್ಲಿ ಬಸ್ ಚಾಲಕ ಲಕ್ಷ್ಮಣ್ (52) ಹಾಗೂ ಬೆಂಗಳೂರಿನ ಕಲ್ಯಾಣ ನಗರದ ನಿವಾಸಿ ಉಮಾಕಾಂತ್ ರಾವ್ (77) ಮೃತಪಟ್ಟಿದ್ದಾರೆ. ಹಲವಾರು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಡಿಕ್ಕಿಯ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕ ಸೀಟಿನಲ್ಲೇ ಸಿಲುಕಿಕೊಂಡಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಕ್ರೇನ್ ಸಹಾಯದಿಂದ ಬಸ್‌ನ ಭಾಗಗಳನ್ನು ತೆರವುಗೊಳಿಸಿ ಚಾಲಕನ ಮೃತದೇಹವನ್ನು ಹೊರತೆಗೆದಿದ್ದಾರೆ.
ಇನ್ನು ಪ್ರಯಾಣಿಕನ ಮೃತದೇಹವನ್ನು ಬಸ್‌ನ ಕಿಟಕಿ ಮೂಲಕ ಹೊರತೆಗೆಯಲಾಗಿದ್ದು, ದೃಶ್ಯ ಮನಕಲಕುವಂತಿತ್ತು.
ಮಾಹಿತಿ ತಿಳಿದ ತಕ್ಷಣ ಪೇರೆಸಂದ್ರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತಕ್ಕೀಡಾದ ಬಸ್ ಹಾಗೂ ಲಾರಿಯನ್ನು ತೆರವುಗೊಳಿಸಿ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.



