ತುಮಕೂರು: ಸಂಬಂಧಿಕರ ಮದುವೆ ಸಮಾರಂಭ ಮುಗಿಸಿ ಬೈಕ್ನಲ್ಲಿ ಮನೆಗೆ ವಾಪಸ್ ತೆರಳುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಮಾದಿಹಳ್ಳಿ ಬಳಿ ನಡೆದಿದೆ.

ಮೃತರನ್ನು ಗೆದ್ದಲೆಹಳ್ಳಿ ನಿವಾಸಿ ದಿನೇಶ್ ಅವರ ಪುತ್ರ ಸಂಜು (23) ಹಾಗೂ ಬೈರನಾಯಕನಹಳ್ಳಿ ಗ್ರಾಮದ ಆನಂದ್ ಕುಮಾರ್ ಅವರ ಪುತ್ರ ಹರ್ಷ (23) ಎಂದು ಗುರುತಿಸಲಾಗಿದೆ.
ಯೂ-ಟರ್ನ್ ತೆಗೆದುಕೊಳ್ಳುವಾಗ ಅಪಘಾತ
ತಿಪಟೂರು-ಅರಸೀಕೆರೆ ರಸ್ತೆಯ ಮಾದಿಹಳ್ಳಿ ಬಳಿ ಈ ಅಪಘಾತ ಸಂಭವಿಸಿದೆ. ಸಂಬಂಧಿಕರ ಮದುವೆ ಮುಗಿಸಿಕೊಂಡು ಇಬ್ಬರೂ ಯುವಕರು ಬೈಕ್ನಲ್ಲಿ ವಾಪಸ್ ಬರುತ್ತಿದ್ದರು. ಈ ವೇಳೆ ಮಾದಿಹಳ್ಳಿ ಬಳಿ ಯೂ-ಟರ್ನ್ ತೆಗೆದುಕೊಳ್ಳುತ್ತಿದ್ದಾಗ, ಅರಸೀಕೆರೆ ಕಡೆಯಿಂದ ತಿಪಟೂರಿಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಬೈಕ್ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ಬೈಕ್ನಲ್ಲಿದ್ದ ಇಬ್ಬರೂ ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಹಾಗೂ ದುಃಖದ ವಾತಾವರಣ ನಿರ್ಮಾಣವಾಗಿದೆ.
ಸ್ಥಳಕ್ಕೆ ಪೊಲೀಸರ ಭೇಟಿ
ತಿಪಟೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.










