ವಿಜಯಸಾಕ್ಷಿ ಸುದ್ದಿ, ಗದಗ : ಜೆಡಿಎಸ್–ಬಿಜೆಪಿ ಮೈತ್ರಿಯ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ `ನಾಯಿ ಹಸಿದಿತ್ತು, ಅನ್ನ ಹಳಸಿತ್ತು’ ಎನ್ನುವ ಮಾತಿಗೆ ಹೋಲಿಕೆ ಮಾಡಿದ್ದಾರೆ. ಆದರೆ ನಾಯಿಗೆ ನಿಷ್ಠೆ ಜಾಸ್ತಿ. ಆ ಕಾರಣಕ್ಕಾಗಿಯೇ ರೈತರ ಸಾಲ ಮನ್ನಾ ಮಾಡುವಂಥ ದೊಡ್ಡ ನಿರ್ಧಾರ ತೆಗೆದುಕೊಂಡಿತು ಎನ್ನುವುದು ಅವರಿಗೆ ಗೊತ್ತಿಲ್ಲ ಎಂದು ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಗೋವಿಂದಗೌಡ್ರ ವ್ಯಂಗ್ಯವಾಡಿದರು.
ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ಸೋಲುವ ಭೀತಿಯಿಂದ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ರಾಜ್ಯದಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವುದು ನಿಶ್ಚಿತವಾಗಿದೆ. ಆ ಸತ್ಯವನ್ನು ಅರಗಿಸಿಕೊಳ್ಳಲಾಗದೆ ಮೈತ್ರಿ ಕುರಿತು ಅಪಹಾಸ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಇನ್ನು ಮಾಜಿ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆಯನ್ನು ತಿರುಚುವ ಪ್ರಯತ್ನಗಳು ಕಾಂಗ್ರೆಸ್ಸಿಗರಿಂದ ನಡೆದಿದೆ. ಕಾಂಗ್ರೆಸ್ ಹಿರಿಯ ನಾಯಕರೊಬ್ಬರುನ ಚಿತ್ರನಟಿ ಕಂಗನಾ ರಾಣಾವತ್ ಬಗ್ಗೆ ಕೀಳು ಮಟ್ಟದ ಅಭಿಪ್ರಾಯ ವ್ಯಕ್ತಪಡಿಸಿದ್ದು, ಸ್ವತಃ ಸಿದ್ದರಾಮಯ್ಯ ಅವರೇ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ ಕರೆದಿದ್ದು ಮಹಿಳೆಯರಿಗೆ ಮಾಡಿದ ಅವಮಾನ ಅಲ್ಲವೇ ಎಂದು ಪ್ರಶ್ನಿಸಿದರು.
ಸಿದ್ದರಾಮಯ್ಯ ಅವರಿಗೆ ತಮ್ಮ ಪಕ್ಷದ ಹಿತಾಸಕ್ತಿಗಿಂತ ಜೆಡಿಎಸ್ ಹಿತಾಸಕ್ತಿಯೇ ಮುಖ್ಯವಾಗಿದೆ. ಆ ಕಾರಣಕ್ಕಾಗಿ ಪದೇ ಪದೇ ಜೆಡಿಎಸ್ ವಿಷಯವನ್ನು ಪ್ರಸ್ತಾಪಿಸುತ್ತಾರೆ. ಜೆಡಿಎಸ್‌ಗೆ ದೇವೇಗೌಡರಂಥ ಹಿರಿಯ ನಾಯಕರ ಮಾರ್ಗದರ್ಶನವಿದೆ ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು. ಸುದ್ದಿಗೋಷ್ಠಿಯಲ್ಲಿ ಪ್ರಫುಲ್ ಪುಣೇಕರ್ ಉಪಸ್ಥಿತರಿದ್ದರು.