ಬೆಂಗಳೂರು:– ರಸಗೊಬ್ಬರದ ಹೊಣೆ ಕೇಂದ್ರ ಸರ್ಕಾರದ್ದು, ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡುವುದು ಎಷ್ಟು ಸರಿ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಪ್ರಶ್ನಿಸಿದ್ದಾರೆ.
ಯೂರಿಯಾ ಗೊಬ್ಬರ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಬುಧವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ಜಿಲ್ಲೆಗಳ ಕೃಷಿ ಜಂಟಿ ನಿರ್ದೇಶಕರ ಜೊತೆ ಸಭೆ ನಡೆಸಿದರು. ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ಚಲುವರಾಯಸ್ವಾಮಿ,
ನಾನು ನಿರಂತರವಾಗಿ ಜಿಲ್ಲಾಧಿಕಾರಿಗಳ ಸಂಪರ್ಕದಲ್ಲಿ ಇದ್ದೇನೆ. ವಾಸ್ತವ ಏನಿದೆ ಎಂದು ಜಿಲ್ಲಾಧಿಕಾರಿಗಳ ಜತೆ ಚರ್ಚೆ ಮಾಡುತ್ತಿದ್ದೇನೆ. ಸಿಎಂ ಸಹ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿದ್ದಾರೆ. ವಿಪಕ್ಷದವರ ಟೀಕೆಗೆ ಉತ್ತರ ಕೊಡುವುದಕ್ಕೂ ಮುನ್ನ ರೈತರ ಸಮಸ್ಯೆ ಬಗೆಹರಿಸಬೇಕು ಎಂದು ಹೇಳಿದರು.
ಈ ವರ್ಷ ಕೇಂದ್ರದಿಂದ ಸರಿಯಾಗಿ ಯೂರಿಯಾ ಸರಬರಾಜು ಆಗಿಲ್ಲ. ಮಳೆ ಚನ್ನಾಗಿ ಆಗಿದೆ, ನಾವು ಕೂಡ ನಿರ್ವಹಣೆ ಮಾಡುತ್ತಿದ್ದೇವೆ. ನಾವು ನೇರವಾಗಿ ಆಮದು, ಉತ್ಪಾದನೆ ಮಾಡುವುದಕ್ಕೆ ಆಗಲ್ಲ. ರಸಗೊಬ್ಬರದ ಹೊಣೆ ಕೇಂದ್ರ ಸರ್ಕಾರದ್ದು. ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡುವುದು ಎಷ್ಟು ಸರಿ? ರೈತರನ್ನು ಮುಂದೆ ಇಟ್ಟುಕೊಂಡು ಆರೋಪ ಮಾಡುವುದು ಸರಿಯಿಲ್ಲ ಎಂದು ವಾಗ್ದಾಳಿ ಮಾಡಿದರು.
ರಾಜ್ಯ ಸರ್ಕಾರ ಯೂರಿಯಾ ಉತ್ಪಾದನೆ ಮಾಡುವುದಿಲ್ಲ. ಕೇಂದ್ರ ಸರ್ಕಾರ ರಸಗೊಬ್ಬರ ಪೂರೈಕೆ ಮಾಡಬೇಕು. ಕೇಂದ್ರ ಸರ್ಕಾರ ಜವಾಬ್ದಾರಿ ಹೊತ್ತುಕೊಂಡು ಸಮಸ್ಯೆ ಬಗೆಹರಿಸಬೇಕು. ಈ ಸಂಬಂಧ ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ ಎಂದು ಹೇಳಿದರು.