ಬೆಳಗಾವಿ: ಕ್ಷುಲ್ಲಕ ಕಾರಣಕ್ಕಾಗಿ ಅಳಿಯನೊಬ್ಬ ತನ್ನ ಅತ್ತೆಗೆ ಚಾಕುವಿನಿಂದ ಇರಿದ ಭೀಕರ ಘಟನೆ ಸವದತ್ತಿ ತಾಲೂಕಿನ ಆಲದಕಟ್ಟಿ ಗ್ರಾಮದಲ್ಲಿ ನಡೆದಿದೆ.
ವಿಡಿಯೋ ಕಾಲ್‌ನಲ್ಲಿ ಮಗು ತೋರಿಸಿಲ್ಲ ಎಂಬ ಕಾರಣಕ್ಕೆ ಆರೋಪಿ ಅರವಿಂದ ಗವಳಿ ಸಿಟ್ಟಿಗೆದ್ದಿದ್ದು, ತನ್ನ ಅತ್ತೆ ಮಹಾದೇವಿ (45) ಅವರಿಗೆ ಚಾಕುವಿನಿಂದ ದಾಳಿ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಪತ್ನಿಗೆ ಎರಡು ತಿಂಗಳ ಹಿಂದೆ ಹೆರಿಗೆಯಾಗಿದ್ದು, ಆಕೆ ತವರು ಮನೆಯಲ್ಲಿ ಉಳಿದಿದ್ದಳು. ಅರವಿಂದ ನಿರಂತರವಾಗಿ ವಿಡಿಯೋ ಕಾಲ್ ಮಾಡಿ ಮಗುವನ್ನು ತೋರಿಸುವಂತೆ ಒತ್ತಾಯಿಸುತ್ತಿದ್ದನು. ಇದಕ್ಕೆ ಅತ್ತೆ ವಿರೋಧ ವ್ಯಕ್ತಪಡಿಸಿ ಬುದ್ಧಿವಾದ ಹೇಳಿದ್ದರಿಂದ ಇಬ್ಬರ ನಡುವೆ ವಾಗ್ವಾದ ನಡೆದಿದೆ.
ಇದೇ ದ್ವೇಷದಿಂದ ಅರವಿಂದ ಅತ್ತೆಯ ಮನೆಗೆ ನುಗ್ಗಿ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಗಂಭೀರವಾಗಿ ಗಾಯಗೊಂಡ ಮಹಾದೇವಿಯನ್ನು ಕೂಡಲೇ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಘಟನೆ ಬಳಿಕ ಆರೋಪಿ ಅರವಿಂದ ಸಾಮಾಜಿಕ ಜಾಲತಾಣದಲ್ಲಿ “ಇಂದು ಜೈಲು, ನಾಳೆ ಬೇಲ್… ನಿನ್ನನ್ನು ಬಿಡಲ್ಲ” ಎಂದು ಸ್ಟೇಟಸ್ ಹಾಕಿಕೊಂಡು ಅಹಂಕಾರ ಪ್ರದರ್ಶಿಸಿದ್ದಾನೆ ಎಂದು ತಿಳಿದುಬಂದಿದೆ.
ಮುರಗೋಡ ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.



