ಬೆಂಗಳೂರು: ಫಿಫಾ ವಿಶ್ವಕಪ್ ಫೈನಲ್ ಪಂದ್ಯವನ್ನು ವೀಕ್ಷಿಸಲು ರಾಜ್ಯದ ಫುಟ್ಬಾಲ್ ಅಭಿಮಾನಿಗಳಿಗೆ ಅನುಕೂಲವಾಗುವಂತೆ ಹೋಟೆಲ್ ಹಾಗೂ ರೆಸ್ಟೋರೆಂಟ್‌ಗಳು ಬೆಳಗಿನ ಜಾವ 3.30ರವರೆಗೆ ಕಾರ್ಯನಿರ್ವಹಿಸಲು ವಿಶೇಷ ಅನುಮತಿ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುವಕರ ಮನವಿಯನ್ನು ಪರಿಗಣಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
“ಯಾವ ತಂಡ ಗೆದ್ದರೂ ಅಭಿಮಾನಿಗಳು ತಾಳ್ಮೆ ಕಳೆದುಕೊಳ್ಳದೆ ಶಾಂತಿಯುತವಾಗಿ ಪಂದ್ಯ ವೀಕ್ಷಿಸಬೇಕು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಎಲ್ಲೆಡೆ ಕ್ಯಾಮೆರಾಗಳನ್ನು ಅಳವಡಿಸಿದ್ದು, ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ” ಎಂದು ಹೇಳಿದರು.
ಇದೇ ವೇಳೆ ರಾಜ್ಯದಲ್ಲಿನ ಬರ ಪರಿಸ್ಥಿತಿ ಕುರಿತು ಪ್ರತಿಕ್ರಿಯಿಸಿದ ಅವರು, ಸರ್ಕಾರಕ್ಕೆ ರಜೆ ಎಂಬುದಿಲ್ಲ. ಸಚಿವರು, ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು 24 ಗಂಟೆಯೂ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು.
ಬರ ಪರಿಸ್ಥಿತಿ ನಿರ್ವಹಣೆ ಕುರಿತು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಲಾಗುತ್ತಿದೆ. ಕುಡಿಯುವ ನೀರಿನ ಸಮಸ್ಯೆ ಎದುರಿಸಲು ಈಗಾಗಲೇ ಪ್ರತಿ ತಾಲ್ಲೂಕಿಗೆ ಒಂದು ಕೋಟಿ ರೂಪಾಯಿ ಅನುದಾನ ನೀಡುವ ವ್ಯವಸ್ಥೆ ಮಾಡಲಾಗಿದೆ ಎಂದು ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದರು.

