ಹಾವೇರಿ: ಕಬ್ಬಿನ ಬೆಲೆ ನಿಗದಿ ವಿಚಾರವಾಗಿ ರೈತರು ನಡೆಸುತ್ತಿರುವ ಹೋರಾಟಕ್ಕೆ ತೆರೆ ಎಳೆಯುವ ನಿಟ್ಟಿನಲ್ಲಿ ನಾಳೆ ಹಾವೇರಿಯಲ್ಲಿ ಮಹತ್ವದ ಸಭೆ ನಡೆಯಲಿದೆ.
ದೇವಗಿರಿ ಬಳಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಲಿರುವ ಈ ಸಭೆಯಲ್ಲಿ ಕಬ್ಬಿನ ದರದ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.
ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಅವರ ನೇತೃತ್ವದಲ್ಲಿ ಸಭೆ ನಡೆಯಲಿದೆ. ಜಿ.ಎಂ. ಶುಗರ್ಸ್ ಮತ್ತು ವಿಐಎಂಪಿ ಸಕ್ಕರೆ ಕಾರ್ಖಾನೆಗಳ ಮಾಲೀಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ರೈತರ ಪರವಾಗಿ ಮುಖಂಡರಾದ ಚೂನಪ್ಪ ಪೂಜೇರಿ, ಶಶಿಕಾಂತ ಗುರೂಜಿ, ಅಶೋಕರೆಡ್ಡಿ ಮರಚರೆಡ್ಡಿ ಸೇರಿದಂತೆ ಹಲವು ಮುಖಂಡರು ಪಾಲ್ಗೊಳ್ಳಲಿದ್ದಾರೆ.
ಪ್ರತಿ ಟನ್ ಕಬ್ಬಿಗೆ 3,600 ರೂ. ದರ ನಿಗದಿಪಡಿಸಬೇಕು ಎಂಬುದು ರೈತರ ಪ್ರಮುಖ ಬೇಡಿಕೆಯಾಗಿದೆ. ಆದರೆ, ಈ ಹಿಂದೆ ಜಿ.ಎಂ. ಶುಗರ್ಸ್ 3,000 ರೂ. ಹಾಗೂ ಹೆಬ್ಬಾರ್ ಕಾರ್ಖಾನೆ 3,100 ರೂ. ನೀಡಲು ಒಪ್ಪಿಗೆ ಸೂಚಿಸಿದ್ದವು. ಇದರಿಂದ ಆಕ್ರೋಶಗೊಂಡ ರೈತರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದರು.
ಇನ್ನು ಪೂರ್ವನಿಗದಿತ ಜವಳಿ ಇಲಾಖೆಯ ಸಭೆಯ ಹಿನ್ನೆಲೆಯಲ್ಲಿ ಸಕ್ಕರೆ ಸಚಿವ ರುದ್ರಪ್ಪ ಲಮಾಣಿ ಬೆಂಗಳೂರಿಗೆ ತೆರಳುತ್ತಿರುವುದರಿಂದ ನಾಳಿನ ಸಭೆಗೆ ಗೈರಾಗಲಿದ್ದಾರೆ ಎಂದು ತಿಳಿದುಬಂದಿದೆ.
ಡಿಸಿ ಕಚೇರಿ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್:
ಸಭೆಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ 100ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಭದ್ರತೆಗಾಗಿ 2 ಸಿಪಿಐ, 8 ಪಿಎಸ್ಐ, 8 ಎಎಸ್ಐ, 55 ಪೊಲೀಸ್ ಸಿಬ್ಬಂದಿ, 10ಕ್ಕೂ ಹೆಚ್ಚು ಮಹಿಳಾ ಪೊಲೀಸರು ಹಾಗೂ 2 ಡಿಆರ್ ತುಕಡಿ ವಾಹನಗಳನ್ನು ನಿಯೋಜಿಸಲಾಗಿದೆ.
ನಾಳಿನ ಸಭೆಯಲ್ಲಿ ಕಬ್ಬು ಬೆಳೆಗಾರರ ಬೇಡಿಕೆಗೆ ಸ್ಪಂದನೆ ಸಿಗುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.










