ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಜೀವ ಅತ್ಯಮೂಲ್ಯವಾಗಿದ್ದು, ವಾಹನ ಸವಾರರು ಕಡ್ಡಾಯವಾಗಿ ಸಂಚಾರಿ ನಿಯಮಗಳನ್ನು ಪಾಲಿಸುವ ಮೂಲಕ ತಮ್ಮ ಹಾಗೂ ಇತರರ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಸಿಪಿಐ ಬಿ.ವೈ. ನ್ಯಾಮಗೌಡ್ರ ಹೇಳಿದರು.
ಮಂಗಳವಾರ ಪಟ್ಟಣದಲ್ಲಿ ಹೆಲ್ಮೆಟ್ ಧರಿಸದೇ ದ್ವಿಚಕ್ರ ವಾಹನ ಚಾಲನೆ, ಅಗತ್ಯ ದಾಖಲೆಗಳಿಲ್ಲದೇ ವಾಹನ ಸಂಚಾರ, ಅತಿವೇಗ ಹಾಗೂ ಇತರೆ ಸಂಚಾರಿ ನಿಯಮ ಉಲ್ಲಂಘನೆ ಮಾಡುತ್ತಿದ್ದ ವಾಹನ ಸವಾರರನ್ನು ತಡೆದು ಪೊಲೀಸರು ತಿಳುವಳಿಕೆ ನೀಡಿದರು.
ಈ ವೇಳೆ ಮಾತನಾಡಿದ ಸಿಪಿಐ ನ್ಯಾಮಗೌಡ್ರ, ಸಂಚಾರಿ ನಿಯಮ ಪಾಲನೆಯಿಂದ ರಸ್ತೆ ಅಪಘಾತಗಳನ್ನು ಕಡಿಮೆ ಮಾಡಿ ಅಮೂಲ್ಯ ಜೀವಗಳನ್ನು ಉಳಿಸಬಹುದು. ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ನಾಲ್ಕು ಚಕ್ರ ವಾಹನ ಚಾಲಕರು ಸೀಟ್ ಬೆಲ್ಟ್ ಬಳಸಬೇಕು ಎಂದು ಹೇಳಿದರು.
ವಾಹನ ಚಾಲನೆಯ ವೇಳೆ ಮೊಬೈಲ್ ಬಳಕೆ ಹಾಗೂ ಅತಿವೇಗದ ಚಾಲನೆಯನ್ನು ತಪ್ಪಿಸಬೇಕು. ಮುಖ್ಯವಾಗಿ ಪಾಲಕರು ಅಪ್ರಾಪ್ತ ಮಕ್ಕಳಿಗೆ ಬೈಕ್ ನೀಡಬಾರದು ಎಂದು ಎಚ್ಚರಿಸಿದರು.
ಸಂಚಾರಿ ನಿಯಮ ಉಲ್ಲಂಘನೆ ತಡೆಯಲು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದ್ದು, ಅದರ ಆಧಾರದ ಮೇಲೆಯೇ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಈ ವೇಳೆ ನಿಯಮ ಉಲ್ಲಂಘಿಸಿದ ಅನೇಕರಿಗೆ ಪೊಲೀಸರು ದಂಡ ವಿಧಿಸಿದರು. ಸಿಪಿಐ ನಾಗರಾಜ ಗಡಾದ ಹಾಗೂ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.



