ರಾಯಚೂರು: ಕುಡಿಯುವ ನೀರಿಗಾಗಿ ಗ್ರಾಮ ಪಂಚಾಯತಿ ಕಚೇರಿಗೆ ಬೀಗ ಹಾಕಿ, ಪ್ರತಿಭಟನೆ ಮಾಡಿದ್ದ 80 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಜಿಲ್ಲೆಯ ಲಿಂಗಸುಗೂರು ತಾಲೂಕಿನ ಸರ್ಜಾಪುರ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಗ್ರಾಮ ಪಂಚಾಯತಿ ಕಚೇರಿಗೆ ಬೀಗ ಹಾಕಿ ಸುಮಾರು 80ಕ್ಕೂ ಹೆಚ್ಚು ಮಂದಿ ಪ್ರತಿಭಟನೆ ಮಾಡಿದ್ದರು. PDO ದೂರು ದಾಖಲಿಸಿ ಇದೀಗ ಆ 80 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪ್ರಕರಣ ಸಂಬಂಧ ಸೂಕ್ತ ತನಿಖೆ ನಡೆಸಿ ವರದಿ ನೀಡುವಂತೆ ಸಚಿವ ಶರಣಪ್ರಕಾಶ್ ಪಾಟೀಲ್ ಆದೇಶಿಸಿದ್ದಾರೆ.
ಕುಡಿಯುವ ನೀರಿಗೆ ಆಗ್ರಹಿಸಿ ಏ.3ರಂದು ಸರ್ಜಾಪುರ ಗ್ರಾಮಸ್ಥರು ಗ್ರಾಪಂ ಕಚೇರಿಗೆ ಬೀಗ ಹಾಕಿ, ಪ್ರತಿಭಟನೆ ಮಾಡಿದ್ದರು. ಇದರಿಂದ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ ಆರೋಪಿಸಿ 80 ಜನ ಗ್ರಾಮಸ್ಥರ ವಿರುದ್ಧ ಪಿಡಿಓ ಶೋಭಾರಾಣಿ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ದೂರಿನ ಅನ್ವಯ ಇದೀಗ FIR ದಾಖಲಾಗಿದೆ.
ಪ್ರಕರಣ ದಾಖಲಾಗುತ್ತಿದ್ದಂತೆ ಆಕ್ರೋಶ ಹೊರ ಹಾಕಿರುವ ಗ್ರಾಮಸ್ಥರು, ಕೂಡಲೇ ಕೇಸ್ ವಾಪಸ್ ಪಡೆಯಬೇಕು ಹಾಗೂ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು ಎಂದು ಲಿಂಗಸುಗೂರು ಎಸಿ ಕಚೇರಿ ಮುಂದೆ ಹೋರಾಟ ಮಾಡಿದ್ದರು. ಹೀಗಾಗಿ ಘಟನೆಗೆ ಸಂಬಂಧಿಸಿದಂತೆ ಸಚಿವ ಶರಣಪ್ರಕಾಶ್ ಪಾಟೀಲ್ ಕ್ರಮಕ್ಕೆ ಮುಂದಾಗಿದ್ದಾರೆ.



