ಶ್ರೀನಗರ: ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆ ಮತ್ತು ಸಂಬಂಧಿತ ಪ್ರತಿಭಟನೆಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಅಗಾ ಸೈಯದ್ ರುಹುಲ್ಲಾ ಮೆಹದಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಇಲಾಖೆ ನೀಡಿದ ಮಾಹಿತಿಯ ಪ್ರಕಾರ, ಸಂಸದರು ಡಿಜಿಟಲ್ ವೇದಿಕೆಗಳಲ್ಲಿ ದಾರಿತಪ್ಪಿಸುವ ಮತ್ತು ಕಾನೂನುಬಾಹಿರ ಚಟುವಟಿಕೆಗಳಿಗೆ ಪ್ರಚೋದನೆ ನೀಡುವ ವಿಷಯಗಳನ್ನು ಹಂಚಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ನಡೆಸಿದ ದಾಳಿ ಮತ್ತು ಖಮೇನಿ ಹತ್ಯೆ ವಿಚಾರದಲ್ಲಿ ಕೇಂದ್ರ ಸರ್ಕಾರದ ನಿಲುವನ್ನು ಟೀಕಿಸುವ ಪೋಸ್ಟ್‌ಗಳನ್ನು ಅವರು ಹಂಚಿಕೊಂಡಿದ್ದರು. ಕಾಶ್ಮೀರದಲ್ಲಿ ನಡೆದ ಪ್ರತಿಭಟನೆಗಳು ಹಾಗೂ ಭದ್ರತಾ ಸಿಬ್ಬಂದಿಯೊಂದಿಗಿನ ಘರ್ಷಣೆಯ ವೀಡಿಯೊಗಳನ್ನು ಸಹ ಅಪ್‌ಲೋಡ್ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಪ್ರಕರಣದಲ್ಲಿ ನಗರದ ಮಾಜಿ ಮೇಯರ್ ಜುನೈದ್ ಅಜೀಮ್ ಮಾಟೂ ವಿರುದ್ಧವೂ ಎಫ್‌ಐಆರ್ ದಾಖಲಿಸಲಾಗಿದೆ. ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತರುವ ಉದ್ದೇಶಪೂರ್ವಕ ತಪ್ಪು ಮಾಹಿತಿಯನ್ನು ಹರಡಲಾಗಿದೆ ಎಂಬ ಆರೋಪದಡಿ ಕ್ರಮ ಕೈಗೊಳ್ಳಲಾಗಿದೆ.



