ರಾಯಚೂರು: ನಗರದ ಎಪಿಎಂಸಿ ಪಟೇಲ್ಗಂಜ್ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು ₹30 ಲಕ್ಷ ಮೌಲ್ಯದ ಕಿರಾಣಿ ಹಾಗೂ ಪೂಜಾ ಸಾಮಗ್ರಿಗಳು ಬೆಂಕಿಗಾಹುತಿಯಾಗಿವೆ.
ಪಟೇಲ್ಗಂಜ್ನಲ್ಲಿರುವ ರಾಜು ಪಾಟೀಲ್ ಅವರ ರಾಜರಾಮ್ ಟ್ರೇಡರ್ಸ್ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಗೋದಾಮಿನಲ್ಲಿ ಡ್ರೈಫ್ರೂಟ್ಸ್, ಒಣ ಕೊಬ್ಬರಿ, ದವಸ ಧಾನ್ಯ ಸೇರಿದಂತೆ ಕಿರಾಣಿ ಅಂಗಡಿಗಳಿಗೆ ಪೂರೈಕೆ ಮಾಡುವ ವಿವಿಧ ಸಾಮಗ್ರಿಗಳನ್ನು ಸಂಗ್ರಹಿಸಿಡಲಾಗಿತ್ತು. ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಗೋದಾಮಿನಲ್ಲಿದ್ದ ಬಹುತೇಕ ವಸ್ತುಗಳು ಸುಟ್ಟುಹೋಗಿವೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬೆಂಕಿ ಕಾಣಿಸಿಕೊಂಡ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಕಾರ್ಯಾಚರಣೆ ನಡೆಸಿದ್ದಾರೆ. ಸತತ ಪ್ರಯತ್ನದ ಬಳಿಕ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಗೋದಾಮಿನಲ್ಲಿದ್ದ ಸುಮಾರು ₹30 ಲಕ್ಷ ಮೌಲ್ಯದ ಸಾಮಗ್ರಿಗಳು ಹಾನಿಗೊಳಗಾಗಿವೆ ಎಂದು ಅಂದಾಜಿಸಲಾಗಿದೆ.
ಘಟನೆ ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ಹಾಗೂ ಹಾನಿಯ ಪ್ರಮಾಣದ ಕುರಿತು ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ.



