ಬೆಂಗಳೂರು: ನಗರದ ಬೊಮ್ಮನಹಳ್ಳಿ ಸಮೀಪದ ಹೊಂಗಸಂದ್ರ ಪ್ರದೇಶದಲ್ಲಿರುವ ಕಾರು ಗ್ಯಾರೇಜ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಹಲವು ಐಷರಾಮಿ ಕಾರುಗಳು ಸುಟ್ಟು ಭಸ್ಮವಾದ ಘಟನೆ ನಡೆದಿದೆ.
ರಾತ್ರಿ ಸುಮಾರು 9 ಗಂಟೆ ವೇಳೆಗೆ ಈ ಅವಘಡ ಸಂಭವಿಸಿದ್ದು, ಗ್ಯಾರೇಜ್‌ನಲ್ಲಿ ನಿಲುಗಡೆ ಮಾಡಲಾಗಿದ್ದ BMW ಸೇರಿ ನಾಲ್ಕು–ಐದು ಕಾರುಗಳು ಬೆಂಕಿಗಾಹುತಿಯಾಗಿವೆ. ಬೆಂಕಿ ಹೊತ್ತಿಕೊಂಡ ಕ್ಷಣಾರ್ಧದಲ್ಲೇ ಜ್ವಾಲೆಗಳು ವ್ಯಾಪಕವಾಗಿ ಹರಡಿದ ಪರಿಣಾಮ ವಾಹನಗಳು ಸಂಪೂರ್ಣವಾಗಿ ಕರಕಲಾಗಿವೆ.
ಪ್ರಾಥಮಿಕ ಮಾಹಿತಿ ಪ್ರಕಾರ, ಶಾರ್ಟ್ ಸರ್ಕ್ಯೂಟ್‌ನಿಂದಲೇ ಬೆಂಕಿ ಕಾಣಿಸಿಕೊಂಡಿರಬಹುದೆಂದು ಶಂಕಿಸಲಾಗಿದೆ. ಸ್ಥಳೀಯರು ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಎರಡು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಕೆಲಕಾಲದ ಪರಿಶ್ರಮದ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತಂದವು.
ಅದೃಷ್ಟವಶಾತ್ ಈ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.
ಈ ಘಟನೆ ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಬೆಂಕಿ ಅವಘಡದ ನಿಖರ ಕಾರಣವನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.



