ಬೆಂಗಳೂರು: ನಗರದ ಜಿಕೆವಿಕೆ ಹಿಂಭಾಗದಲ್ಲಿರುವ ಕಾರು ಮತ್ತು ದ್ವಿಚಕ್ರ ವಾಹನಗಳ ಗ್ಯಾರೇಜ್ನಲ್ಲಿ ಭಾನುವಾರ ಬೆಳಗಿನ ಜಾವ ಅಗ್ನಿ ಅವಘಡ ಸಂಭವಿಸಿದೆ.
ಘಟನೆಯಲ್ಲಿ ಮೂರು ಕಾರುಗಳು ಕ್ಷಣಾರ್ಧದಲ್ಲಿ ಬೆಂಕಿಗೆ ಆಹುತಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಕೌಶಿಕ್ ಎಂಬುವವರಿಗೆ ಸೇರಿದ ಕಾರು ಮತ್ತು ದ್ವಿಚಕ್ರ ವಾಹನಗಳ ಗ್ಯಾರೇಜ್ನಲ್ಲಿ ಭಾನುವಾರ ಬೆಳಗಿನ ಜಾವ ಸುಮಾರು 3 ಗಂಟೆಯ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ. ನೋಡನೋಡುತ್ತಿದ್ದಂತೆಯೇ ಬೆಂಕಿಯ ಜ್ವಾಲೆ ವ್ಯಾಪಿಸಿ ಗ್ಯಾರೇಜ್ನಲ್ಲಿದ್ದ ಮೂರು ಕಾರುಗಳು ಹೊತ್ತಿ ಉರಿದಿವೆ.
ಗ್ಯಾರೇಜ್ ಸುತ್ತಮುತ್ತ ವಸತಿ ಪ್ರದೇಶವಿರುವುದರಿಂದ ಬೆಂಕಿ ಇತರ ಮನೆಗಳಿಗೂ ವ್ಯಾಪಿಸಬಹುದು ಎಂಬ ಆತಂಕ ಸ್ಥಳೀಯರಲ್ಲಿ ಮನೆಮಾಡಿತ್ತು. ಘಟನೆ ಗಮನಕ್ಕೆ ಬರುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಲಾಗಿದ್ದು, ತಕ್ಷಣ ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು.
ಅಗ್ನಿಶಾಮಕ ಸಿಬ್ಬಂದಿಯ ಸಮಯೋಚಿತ ಕಾರ್ಯಾಚರಣೆಯಿಂದ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣವೇನು ಎಂಬುದು ತಿಳಿದುಬಂದಿಲ್ಲ.
ಈ ಘಟನೆ ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸಂಬಂಧಪಟ್ಟ ಅಧಿಕಾರಿಗಳು ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದಾರೆ.



