ರಾಯಚೂರು: ಸರ್ಕಾರಿ ರಜೆ ದಿನವೇ ಲಿಂಗಸುಗೂರಿನ ರೇಷ್ಮೆ ಇಲಾಖೆಯ ತಾಲೂಕು ಕಚೇರಿಯಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿದೆ. ಶನಿವಾರ ಬೆಳಗ್ಗೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಕಚೇರಿಯಲ್ಲಿದ್ದ ಹಲವು ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.
ನಾಲ್ಕನೇ ಶನಿವಾರದ ಹಿನ್ನೆಲೆಯಲ್ಲಿ ಕಚೇರಿಗೆ ಬೀಗ ಹಾಕಲಾಗಿತ್ತು. ಸಿಬ್ಬಂದಿ ಇಲ್ಲದ ಸಮಯದಲ್ಲಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಶಾರ್ಟ್ ಸರ್ಕ್ಯೂಟ್‌ನಿಂದ ಘಟನೆ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.
ಅಗ್ನಿಯ ತೀವ್ರತೆಗೆ ಕಚೇರಿಯ ಪೀಠೋಪಕರಣಗಳು, ಕಂಪ್ಯೂಟರ್‌ಗಳು ಹಾಗೂ ಮಹತ್ವದ ದಾಖಲೆಗಳು ಸುಟ್ಟು ಭಸ್ಮವಾಗಿವೆ. ಘಟನೆ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಕೈಗೊಂಡಿದ್ದಾರೆ.
ಲಿಂಗಸುಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಗ್ನಿ ಅವಘಡದ ನಿಖರ ಕಾರಣ ಹಾಗೂ ಹಾನಿಯ ಪ್ರಮಾಣದ ಬಗ್ಗೆ ಅಧಿಕಾರಿಗಳು ಪರಿಶೀಲನೆ ಮುಂದುವರಿಸಿದ್ದಾರೆ.



