ಕಠ್ಮಂಡು: ನೇಪಾಳದ ರಾಜಧಾನಿ ಕಠ್ಮಂಡುವಿನ ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ಟರ್ಕಿಶ್ ಏರ್ಲೈನ್ಸ್ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡು ಭಾರೀ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ.
ಇಸ್ತಾಂಬುಲ್‌ನಿಂದ ಕಠ್ಮಂಡುವಿಗೆ ಆಗಮಿಸಿದ್ದ ಟರ್ಕಿಶ್ ಏರ್ಲೈನ್ಸ್ ವಿಮಾನ ಇಂದು ಮುಂಜಾನೆ ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ವಿಮಾನದಲ್ಲಿ 11 ಸಿಬ್ಬಂದಿ ಸೇರಿ ಒಟ್ಟು 278 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು.
ಲ್ಯಾಂಡಿಂಗ್ ವೇಳೆ ವಿಮಾನದ ಬಲಭಾಗದ ಟೈರ್‌ಗಳಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ವಿಮಾನ ನಿಲ್ದಾಣದ ಸಿಬ್ಬಂದಿ ಎಚ್ಚೆತ್ತುಕೊಂಡು ತುರ್ತು ಕ್ರಮ ಕೈಗೊಂಡರು. ತಕ್ಷಣವೇ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ವಿಮಾನದಿಂದ ಕೆಳಗಿಳಿಸಲಾಯಿತು.
ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎಲ್ಲ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ.
ಘಟನೆಯ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಕುರಿತು ಟರ್ಕಿಶ್ ಏರ್ಲೈನ್ಸ್ ಹಾಗೂ ವಿಮಾನ ನಿಲ್ದಾಣ ಪ್ರಾಧಿಕಾರದಿಂದ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ.
ಗಮನಾರ್ಹವಾಗಿ, 2015ರಲ್ಲಿ ಇದೇ ಟರ್ಕಿಶ್ ಏರ್ಲೈನ್ಸ್‌ಗೆ ಸೇರಿದ ಮತ್ತೊಂದು ವಿಮಾನ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ನಿಯಂತ್ರಣ ತಪ್ಪಿ ಉರುಳಿ ಬಿದ್ದಿತ್ತು. ಆ ಅವಘಡದ ಪರಿಣಾಮ ವಿಮಾನ ನಿಲ್ದಾಣ ನಾಲ್ಕು ದಿನಗಳ ಕಾಲ ಬಂದ್ ಆಗಿದ್ದ ಘಟನೆ ಮತ್ತೆ ನೆನಪಾಗಿದೆ.



