ದಾವಣಗೆರೆ: ಗೂಡ್ಸ್ ವಾಹನ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ ಹಾಗೂ ಮೂರು ವರ್ಷದ ಮಗಳು ಮೃತಪಟ್ಟಿರುವ ದಾರುಣ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ದೀಟೂರು ಗ್ರಾಮದ ಗಂಗನರಸಿ ಕ್ರಾಸ್ ಬಳಿ ನಡೆದಿದೆ.
ಮೃತರನ್ನು ಹರಿಹರ ನಗರದ ಆಶ್ರಯ ಕಾಲೊನಿ ನಿವಾಸಿ, ಟ್ಯಾಕ್ಸಿ ಚಾಲಕ ಮನೋಜ್ (35) ಹಾಗೂ ಅವರ ಪುತ್ರಿ ಧೃತಿ (3) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮನೋಜ್ ಅವರ ಪತ್ನಿ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ.
ಮನೋಜ್ ಅವರು ಪತ್ನಿ ಹಾಗೂ ಮೂವರು ಮಕ್ಕಳೊಂದಿಗೆ ಹೆಚ್. ಕಲ್ಪನಹಳ್ಳಿಯಲ್ಲಿ ಹಬ್ಬ ಮುಗಿಸಿಕೊಂಡು ಬೈಕ್ನಲ್ಲಿ ಹರಿಹರಕ್ಕೆ ವಾಪಸಾಗುತ್ತಿದ್ದರು. ಈ ವೇಳೆ ಗಂಗನರಸಿ-ದೀಟೂರು ರಸ್ತೆಯ ಕ್ರಾಸ್ ಬಳಿ ಎದುರಿನಿಂದ ಬಂದ ಗೂಡ್ಸ್ ವಾಹನ ಬೈಕ್ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಬೈಕ್ನಲ್ಲಿದ್ದ ಐವರೂ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಮನೋಜ್ ಹಾಗೂ ಮಗಳು ಧೃತಿಯನ್ನು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ಸಂಬಂಧ ಗೂಡ್ಸ್ ವಾಹನದ ಚಾಲಕನ ವಿರುದ್ಧ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.









