ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಫ್ಲೆಕ್ಸ್ ರಾಜಕೀಯ ಮತ್ತೆ ಮುನ್ನೆಲೆಗೆ ಬಂದಿದೆ.
ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಮಿಮ್ಸ್) ಆಸ್ಪತ್ರೆ ಆವರಣದಲ್ಲಿ ಅಳವಡಿಸಲಾಗಿದ್ದ ಅಭಿವೃದ್ಧಿ ಕಾಮಗಾರಿಯ ನಾಮಫಲಕದಲ್ಲಿನ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಭಾವಚಿತ್ರಗಳಿಗೆ ಟೇಪ್ ಅಂಟಿಸಿ ಮುಚ್ಚಿರುವ ಘಟನೆ ವಿವಾದಕ್ಕೆ ಕಾರಣವಾಗಿದೆ.
ಎರಡು ದಿನಗಳ ಹಿಂದಷ್ಟೇ ಜಿಲ್ಲಾ ಪಂಚಾಯಿತಿ ಕೆಡಿಪಿ ಸಭೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಹೆಸರಿದ್ದ ನಾಮಫಲಕ ತೆರವುಗೊಳಿಸಿದ ವಿಚಾರ ಭಾರೀ ಚರ್ಚೆಗೆ ಕಾರಣವಾಗಿತ್ತು. ಈ ವಿವಾದದ ಬೆನ್ನಲ್ಲೇ ಇದೀಗ ಮಿಮ್ಸ್ ಆಸ್ಪತ್ರೆ ಆವರಣದಲ್ಲೂ ಇದೇ ರೀತಿಯ ಘಟನೆ ನಡೆದಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ 3 ಕೋಟಿ ರೂ. ಸಿಎಸ್ಆರ್ ಅನುದಾನದಡಿ ಮಿಮ್ಸ್ ಆಸ್ಪತ್ರೆ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಈ ಕಾಮಗಾರಿಗೆ ಸಂಬಂಧಿಸಿದಂತೆ ಅಳವಡಿಸಲಾಗಿದ್ದ ನಾಮಫಲಕದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಭಾವಚಿತ್ರ, ಹೆಸರು ಹಾಗೂ ಜೆಡಿಎಸ್ ಪಕ್ಷದ ಚಿಹ್ನೆಯನ್ನು ಮುದ್ರಿಸಲಾಗಿತ್ತು.
ಆದರೆ, ಕಾಂಗ್ರೆಸ್ ಮುಖಂಡರ ಆಕ್ಷೇಪದ ಹಿನ್ನೆಲೆಯಲ್ಲಿ ಸಿಬ್ಬಂದಿ ನಾಮಫಲಕದಲ್ಲಿದ್ದ ಭಾವಚಿತ್ರಗಳು ಹಾಗೂ ಹೆಸರುಗಳಿಗೆ ಟೇಪ್ ಅಂಟಿಸಿ ಮುಚ್ಚಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ದೃಶ್ಯವನ್ನು ಕೆಲವರು ವಿಡಿಯೋ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವಿಶೇಷವಾಗಿ ಜೆಡಿಎಸ್ ಬೆಂಬಲಿಗರ ಪೇಜ್ಗಳಲ್ಲಿ ವಿಡಿಯೋ ವೈರಲ್ ಆಗಿದ್ದು, ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಡಿಯೋ ವೈರಲ್ ಆಗಿ ವಿವಾದ ತೀವ್ರಗೊಳ್ಳುತ್ತಿದ್ದಂತೆ ಮಿಮ್ಸ್ ಆಡಳಿತ ಮಂಡಳಿ ಎಚ್ಚೆತ್ತುಕೊಂಡಿದೆ. ನಾಮಫಲಕದ ಮೇಲಿದ್ದ ಟೇಪ್ಗಳನ್ನು ತಕ್ಷಣವೇ ತೆರವುಗೊಳಿಸಿ ಪರಿಸ್ಥಿತಿ ತಿಳಿಗೊಳಿಸಲು ಮುಂದಾಗಿದೆ. ಸದ್ಯ ಕೆಡಿಪಿ ಸಭೆಯ ನಾಮಫಲಕ ವಿವಾದದ ಬೆನ್ನಲ್ಲೇ ಮಿಮ್ಸ್ ಆಸ್ಪತ್ರೆಯಲ್ಲಿನ ಈ ಬೆಳವಣಿಗೆ ಮಂಡ್ಯ ರಾಜಕೀಯ ವಲಯದಲ್ಲಿ ಮತ್ತೊಂದು ಸುತ್ತಿನ ಚರ್ಚೆಗೆ ಕಾರಣವಾಗಿದೆ.










