ರಾಯಚೂರು: ನಾರಾಯಣಪುರ ಜಲಾಶಯದಿಂದ ಭಾರೀ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡುತ್ತಿರುವ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯಲ್ಲಿ ಕೃಷ್ಣಾ ನದಿ ಮೈದುಂಬಿ ಹರಿಯುತ್ತಿದೆ.
ರಾಯಚೂರು ತಾಲೂಕಿನ ಕಾಡ್ಲೂರು ಗ್ರಾಮದ ನದಿ ದಂಡೆಯಲ್ಲಿರುವ ಶ್ರೀ ಉಪೇಂದ್ರ ತೀರ್ಥ ಕರಾರ್ಚಿತ ಪ್ರಾಣದೇವರ ದೇವಸ್ಥಾನ ಜಲಾವೃತವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ದೇವಸ್ಥಾನಕ್ಕೆ ಭಕ್ತರು ತೆರಳದಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಕೃಷ್ಣಾ ನದಿಯ ಮೇಲ್ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾರಾಯಣಪುರ ಜಲಾಶಯ ಭರ್ತಿಯಾಗುವ ಹಂತ ತಲುಪಿದೆ. ಜಲಾಶಯ ಭರ್ತಿಯಾಗಲು ಇನ್ನೂ ಸುಮಾರು 4 ಟಿಎಂಸಿ ನೀರು ಮಾತ್ರ ಬಾಕಿ ಉಳಿದಿದೆ.
ಸದ್ಯ ನಾರಾಯಣಪುರ ಜಲಾಶಯಕ್ಕೆ 1.1 ಲಕ್ಷ ಕ್ಯೂಸೆಕ್ ಒಳಹರಿವು ಇದ್ದು, ಜಲಾಶಯದಿಂದ ಕೃಷ್ಣಾ ನದಿಗೆ 1 ಲಕ್ಷ ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ.
ಆಲಮಟ್ಟಿ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರು ಹರಿದು ಬಂದರೆ ನಾರಾಯಣಪುರ ಜಲಾಶಯದ ಹೊರಹರಿವನ್ನು ಮತ್ತಷ್ಟು ಹೆಚ್ಚಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈಗಾಗಲೇ ಲಿಂಗಸುಗೂರು ತಾಲೂಕಿನ ಶೀಲಹಳ್ಳಿ ಸೇತುವೆ ಮುಳುಗುವ ಹಂತ ತಲುಪಿದೆ. ನೀರಿನ ಪ್ರಮಾಣ ಮತ್ತಷ್ಟು ಹೆಚ್ಚಾದರೆ ರಾಯಚೂರು, ಲಿಂಗಸುಗೂರು ಹಾಗೂ ದೇವದುರ್ಗ ತಾಲೂಕುಗಳ ಹಲವು ಸೇತುವೆಗಳು ಮುಳುಗುವ ಸಾಧ್ಯತೆ ಇದೆ.
ಕೃಷ್ಣಾ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಹಾಗೂ ನದಿ ಬಳಿ ತೆರಳದಂತೆ ಜಿಲ್ಲಾಡಳಿತ ಮನವಿ ಮಾಡಿದೆ.



