ವಿಜಯಸಾಕ್ಷಿ ಸುದ್ದಿ, ಧಾರವಾಡ: ಭಾರತೀಯ ಹವಾಮಾನ ಇಲಾಖೆಯ ಮಾಹಿತಿಯಂತೆ 2025ನೇ ಸಾಲಿನ ಬಿಸಿ ವಾತಾವರಣ ಅವಧಿಯಲ್ಲಿ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನದ ಸಾಧ್ಯತೆಗಳಿದ್ದು, ಬಿಸಿಗಾಳಿ ಹಾಗೂ ತಾಪಮಾನದ ಮುನ್ಸೂಚನೆಯಿದೆ. ಮುಂದಿನ ಅವಧಿಯಲ್ಲಿ ಸಾಮಾನ್ಯ ಶಾಖದ ಅಲೆಗಳ ದಿನಗಳು ಹೆಚ್ಚಾಗುವ ಸಾಧ್ಯತೆಯಿದೆ. ಶಾಖದ ಅಲೆಗಳಿಂದ ರಕ್ಷಿಸಿಕೊಳ್ಳಲು ಮಹಿಳೆಯರು, ಮಕ್ಕಳು, ವೃದ್ಧರು ಸೇರಿದಂತೆ ಎಲ್ಲ ಸಾರ್ವಜನಿಕರು ಜಾಗೃತಿವಹಿಸಿ, ಆರೋಗ್ಯ ಇಲಾಖೆಯ ಸುರಕ್ಷತಾ ಮಾರ್ಗಸೂಚಿಗಳ ಕುರಿತು ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಪ್ರಸ್ತುತ ಧಾರವಾಡ ಜಿಲ್ಲೆಯಲ್ಲಿಯೂ ಸಹ 40 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚು ಗರಿಷ್ಠ ತಾಪಮಾನದ ಬಗ್ಗೆ ವರದಿಯಾಗುತ್ತಿದೆ. ಆದ್ದರಿಂದ ಅತೀ ಹೆಚ್ಚು ತಾಪಮಾನದಿಂದ ಆಗುವ ಪ್ರತಿಕೂಲ ಪರಿಣಾಮವನ್ನು ತಡೆಗಟ್ಟಲು ಆರೋಗ್ಯ ಇಲಾಖೆ ನೀಡಿದ ಸಲಹೆ-ಸೂಚನೆಗಳನ್ನು ಜಿಲ್ಲೆಯ ಸಾರ್ವಜನಿಕರು ಪಾಲಿಸಬೇಕೆಂದು ಅವರು ತಿಳಿಸಿದ್ದಾರೆ.
ಗರಿಷ್ಠ ತಾಪಮಾನ ಇರುವ ಮಧ್ಯಾಹ್ನ 12ರಿಂದ 3 ಗಂಟೆವರೆಗಿನ ಅವಧಿಯಲ್ಲಿ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಬೇಕು. ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರು ಕುಡಿಯಬೇಕು. ಹಗುರವಾದ, ತಿಳಿ ಬಣ್ಣದ ಸಡಿಲವಾದ ಮತ್ತು ಹತ್ತಿ ಬಟ್ಟೆಗಳನ್ನು ಧರಿಸಬೇಕು. ಬಿಸಿಲಿನಲ್ಲಿ ಹೋಗುವಾಗ ರಕ್ಷಣೆಗಾಗಿ ಕನ್ನಡಕಗಳು, ಛತ್ರಿ, ಟೋಪಿ, ಬೂಟುಗಳು ಅಥವಾ ಚಪ್ಪಲಿಗಳನ್ನು ಬಳಸಬೇಕು. ಹೊರಗಿನ ಉಷ್ಣತೆಯು ಅಧಿಕವಾಗಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಬೇಕು.
ಪೂರ್ವಾಹ್ನ 11 ಗಂಟೆಯಿಂದ ಸಂಜೆ 4 ಗಂಟೆಯ ಅವಧಿಯಲ್ಲಿ ಹೊರಾಂಗಣ ಸಭೆಗಳು, ಚಟುವಟಿಕೆಗಳು ನಡೆಯುವ ಪ್ರದೇಶದಲ್ಲಿ ಸಾರ್ವಜನಿಕರಿಗೆ ಬಿಸಿಲಿನಿಂದ ರಕ್ಷಣೆಯನ್ನು ನೀಡಲು ಅಗತ್ಯ ಶಾಮಿಯಾನ, ಪೆಂಡಾಲ್ ವ್ಯವಸ್ಥೆ ಮಾಡಬೇಕು. ಉತ್ತಮ ಗಾಳಿಯ ವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳುವುದು ಹಾಗೂ ಸಭಿಕರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಡ್ಡಾಯವಾಗಿ ಮಾಡಬೇಕು ಎಂದು ಸೂಚಿಸಿದೆ.
ಅತೀ ಹೆಚ್ಚು ತಾಪಮಾನದಿಂದ ಉದ್ಭವಿಸಬಹುದಾದ ರೋಗಲಕ್ಷಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಿಂದ ಆಗಿಂದಾಗ್ಗೆ ನೀಡುವ ಮಾರ್ಗಸೂಚಿಗಳನ್ನು ಪಾಲಿಸಬೇಕು. ಆರೋಗ್ಯ ಇಲಾಖೆ ನೀಡಿರುವ ಎಲ್ಲ ರೀತಿಯ ಆರೋಗ್ಯ ಸುರಕ್ಷತಾ ಕ್ರಮಗಳನ್ನು ತಪ್ಪದೇ ಪಾಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅತೀ ಹೆಚ್ಚು ತಾಪಮಾನದಿಂದ ಸಾಮಾನ್ಯವಾಗಿ ನಿರ್ಜಲೀಕರಣ, ಶಾಖ ಸೆಳೆತ, ಶಾಖದ ಬಳಲಿಕೆ ಅಥವಾ ಶಾಖದ ಅಘಾತದಂತಹ (ಸನ್ ಸ್ಟ್ರೋಕ್) ಆರೋಗ್ಯದ ದುಷ್ಪರಿಣಾಮಗಳು ಉಂಟಾಗುವ ಸಾಧ್ಯತೆ ಇರುತ್ತದೆ. ಅತೀ ಹೆಚ್ಚು ತಾಪಮಾನದಿಂದ ತುತ್ತಾದ ವ್ಯಕ್ತಿಯನ್ನು ನೆರಳಿನ ಅಡಿಯಲ್ಲಿ ತಂಪಾದ ಸ್ಥಳಕ್ಕೆ ಸ್ಥಳಾಂತರಿಸಬೇಕು. ಒದ್ದೆಯಾದ ಬಟ್ಟೆಯಿಂದ ಮೈ ಒರಸುವುದು ಹಾಗೂ ದೇಹದ ಉಷ್ಣತೆಯನ್ನು ತಗ್ಗಿಸಲು ತಲೆಯ ಮೇಲೆ ನೀರನ್ನು ಹಾಕುವುದು ಹಾಗೂ ವ್ಯಕ್ತಿಗೆ ತಂಪಾದ ಗಾಳಿಯ ವ್ಯವಸ್ಥೆ ಮಾಡುವುದು ಮಾಡಬೇಕು.