ಬೆಂಗಳೂರು: ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ವೆಚ್ಚದ ಕುರಿತು ಸಾರ್ವಜನಿಕರಿಂದ ಹಲವು ಆರೋಪಗಳು ಕೇಳಿಬರುತ್ತಿರುವ ಬೆನ್ನಲ್ಲೇ, ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರ ಅಮಾನವೀಯ ವರ್ತನೆ ಬೆಳಕಿಗೆ ಬಂದಿದೆ.
ಚಿಕಿತ್ಸೆಗಾಗಿ ಪಾವತಿಸಬೇಕಿದ್ದ ಹಣದಲ್ಲಿ ₹5 ಸಾವಿರ ಕಡಿಮೆ ಇದ್ದ ಕಾರಣಕ್ಕೆ ರೋಗಿಯ ಸಂಬಂಧಿಯ ಮೊಬೈಲ್ ಫೋನ್ ಅನ್ನು ಅಡವಿಡುವಂತೆ ಆಸ್ಪತ್ರೆ ಸಿಬ್ಬಂದಿ ಒತ್ತಾಯಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಬೆಂಗಳೂರಿನ ಥಣಿಸಂದ್ರದಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಆರೋಗ್ಯ ಸಚಿವ ಖಾದರ್, ಆಸ್ಪತ್ರೆಗೆ ಕೆಪಿಎಂಇ (ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆ) ಅಧಿಕಾರಿಗಳನ್ನು ಕಳುಹಿಸಿದ್ದಾರೆ.
ಅಲ್ಲದೆ, ಪ್ರಕರಣದ ಕುರಿತು ಪರಿಶೀಲನೆ ನಡೆಸಿ, ಆಸ್ಪತ್ರೆ ವಿರುದ್ಧ ನಿಯಮಾನುಸಾರ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.









