ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ವಿದೇಶಿ ಮಹಿಳಾ ಪ್ರವಾಸಿಯೊಬ್ಬರಿಗೆ ಸಾರ್ವಜನಿಕ ಸ್ಥಳದಲ್ಲಿ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದ್ದು, ಸಂಬಂಧಿಸಿದ ಸಿಸಿಟಿವಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆ ಬೆಳಕಿಗೆ ಬಂದ ಬೆನ್ನಲ್ಲೇ ಸಾರ್ವಜನಿಕರು ಆರೋಪಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಸಾಮಾಜಿಕ ಜಾಲತಾಣದ ‘ದಿ ಮಾಡರ್ನ್ ಹಿಮಾಚಲ’ ಎಂಬ ಪುಟದಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಅದರಲ್ಲಿ ವಿದೇಶಿ ಮಹಿಳೆ ತನ್ನ ಸ್ನೇಹಿತನೊಂದಿಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವುದು ಕಂಡುಬರುತ್ತದೆ. ಇದೇ ವೇಳೆ ಸಮೀಪದಲ್ಲಿದ್ದ ಯುವಕನೊಬ್ಬ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿರುವ ಆರೋಪ ಕೇಳಿಬಂದಿದೆ.
ವಿಡಿಯೋ ವೈರಲ್ ಆದ ಬಳಿಕ ನೆಟ್ಟಿಗರು ಪ್ರವಾಸಿಗರ ಸುರಕ್ಷತೆ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ. ವಿಶೇಷವಾಗಿ ಮಹಿಳಾ ಪ್ರವಾಸಿಗರ ಭದ್ರತೆ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು ಎಂದು ಆಗ್ರಹಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಮಾಚಲ ಪ್ರದೇಶ ಪೊಲೀಸರನ್ನು ಸಾಮಾಜಿಕ ಜಾಲತಾಣ ಪೋಸ್ಟ್ನಲ್ಲಿ ಟ್ಯಾಗ್ ಮಾಡಲಾಗಿದ್ದು, ವಿಡಿಯೋ ಆಧರಿಸಿ ಪರಿಶೀಲನೆ ನಡೆಸುವಂತೆ ಒತ್ತಾಯಿಸಲಾಗಿದೆ. ಸದ್ಯ ಘಟನೆಯ ನಿಖರ ಸ್ಥಳ ಮತ್ತು ವಿಡಿಯೋದಲ್ಲಿರುವ ವ್ಯಕ್ತಿಯ ಗುರುತು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ ಎನ್ನಲಾಗಿದೆ.
ಭಾರತಕ್ಕೆ ಆಗಮಿಸುವ ದೇಶ-ವಿದೇಶಗಳ ಪ್ರವಾಸಿಗರಿಗೆ ಸುರಕ್ಷಿತ ವಾತಾವರಣ ಕಲ್ಪಿಸುವುದು ಅತ್ಯಗತ್ಯವಾಗಿದ್ದು, ಇಂತಹ ಘಟನೆಗಳು ಪ್ರವಾಸೋದ್ಯಮ ಕ್ಷೇತ್ರದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಸಿಸಿಟಿವಿ ದೃಶ್ಯಾವಳಿ ಹಾಗೂ ವೈರಲ್ ವಿಡಿಯೋ ಆಧರಿಸಿ ತನಿಖೆ ಆರಂಭಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದು, ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.



