ಬೆಂಗಳೂರು: ರಥಸಪ್ತಮಿಯ ನಂತರ ಬಿಸಿಲಿನ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಾಡ್ಗಿಚ್ಚಿನ ಅಪಾಯವೂ ಹೆಚ್ಚಾಗುವ ಸಾಧ್ಯತೆ ಇರುವುದರಿಂದ, ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವೀಡಿಯೋ ಕಾನ್ಫರೆನ್ಸ್ ಮೂಲಕ ಅರಣ್ಯ ಹಾಗೂ ವನ್ಯಜೀವಿ ವಿಭಾಗದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಕಾಡಿನ ಬೆಂಕಿಯಿಂದ ಅರಣ್ಯ ಸಂಪತ್ತು ನಾಶವಾಗದಂತೆ ಕಟ್ಟೆಚ್ಚರ ವಹಿಸುವಂತೆ ತಿಳಿಸಿದರು. ಡ್ರೋನ್ ಸೌಲಭ್ಯ ಇರುವ ಪ್ರದೇಶಗಳಲ್ಲಿ ಕ್ಯಾಮೆರಾ ಮೂಲಕ ನಿಗಾ ಇಡಬೇಕು. ಗಸ್ತು ಹೆಚ್ಚಿಸಿ, ಸೂಕ್ಷ್ಮ ಪ್ರದೇಶಗಳಲ್ಲಿ ಸಿಬ್ಬಂದಿ ಸದಾ ಎಚ್ಚರದಿಂದ ಇರಬೇಕೆಂದು ನಿರ್ದೇಶಿಸಿದರು.
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ಮೇವು ಹಾಗೂ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲು ಸೂಚಿಸಿದ ಅವರು, ಜಲಗುಂಡಿಗಳಿಗೆ ಸೌರ ಪಂಪ್‌ಗಳ ಮೂಲಕ ಕೊಳವೆ ಬಾವಿಯಿಂದ ನೀರು ಹರಿಸುವ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಪ್ರತಿ ವರ್ಷ ಶಿವರಾತ್ರಿ, ಯುಗಾದಿ ಹಾಗೂ ದೀಪಾವಳಿ ಸಂದರ್ಭಗಳಲ್ಲಿ ಮಾದಪ್ಪನ ಭಕ್ತರು ಅರಣ್ಯ ಮಾರ್ಗವಾಗಿ ಪಾದಯಾತ್ರೆ ಮೂಲಕ ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸುವುದು ರೂಢಿಯಾಗಿರುವುದನ್ನು ಉಲ್ಲೇಖಿಸಿದ ಸಚಿವರು, ಕಾಲುದಾರಿ ಹಾಗೂ ಮೆಟ್ಟಿಲು ಮಾರ್ಗಗಳಲ್ಲಿ ಡ್ರೋನ್ ಕ್ಯಾಮೆರಾ ಅಳವಡಿಸಿ ಸತತ ನಿಗಾ ಇಡುವಂತೆ ಸೂಚಿಸಿದರು. ಅಲ್ಲದೆ, ಅರಣ್ಯ ಸಿಬ್ಬಂದಿ, ಹೋಂಗಾರ್ಡ್ಸ್ ಹಾಗೂ ಸ್ಥಳೀಯ ಸಿಬ್ಬಂದಿಯನ್ನೊಳಗೊಂಡ ತಂಡಗಳನ್ನು ರಚಿಸಿ ಭಕ್ತರಿಗೆ ನೆರವು ನೀಡುವಂತೆ ಹೇಳಿದರು.
ಈ ಕಾರ್ಯಕ್ಕೆ ತಗಲುವ ವೆಚ್ಚವನ್ನು ಭರಿಸಲು ಮಲೆ ಮಹದೇಶ್ವರಸ್ವಾಮಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರ ಹಾಗೂ ಜಿಲ್ಲಾಡಳಿತಕ್ಕೆ ಪತ್ರ ಬರೆಯುವಂತೆಯೂ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಂಡ್ಯ, ಮೈಸೂರು, ರಾಮನಗರ, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಿಂದ ಭಕ್ತರು ಕಾವೇರಿ ನದಿ ದಾಟಿ ಹನೂರು ತಾಲೂಕಿನ ಬಸವನಕಣಕ್ಕೆ ಬಂದು, ಅಲ್ಲಿಂದ ಶಾಗ್ಯ, ಡಿ.ಎಂ. ಸಮುದ್ರ, ಎಲ್ಲೆಮಾಳ, ಮಲ್ಲಯ್ಯನಪುರ, ಕೌದಳ್ಳಿ, ವಡಕೆಹಳ್ಳ, ಕೋಣನಕೆರೆ ಹಾಗೂ ತಾಳುಬೆಟ್ಟ ಮಾರ್ಗವಾಗಿ ಪಾದಯಾತ್ರೆಯಲ್ಲಿ ಬೆಟ್ಟಕ್ಕೆ ತೆರಳುತ್ತಿರುವುದು ಅಪಾಯಕಾರಿಯಾಗಿದೆ ಎಂದು ಸಚಿವರು ಎಚ್ಚರಿಸಿದರು. ವನ್ಯಜೀವಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿರುವುದರಿಂದ ಭಕ್ತರ ಭಾವನೆಗೆ ಧಕ್ಕೆಯಾಗದಂತೆ ಅವರನ್ನು ಮನವೊಲಿಸುವ ಅಗತ್ಯವಿದೆ ಎಂದು ತಿಳಿಸಿದರು.
ರಾತ್ರಿ ವೇಳೆ ಕಾಡಿನ ಅಂಚು ಹಾಗೂ ಕಾಡಿನೊಳಗಿನ ವಸತಿ ಪ್ರದೇಶಗಳಲ್ಲಿ ತಂಗುವುದು ಅಪಾಯಕಾರಿಯಾಗಿದೆ ಎಂದು ತಿಳಿಸಿದ ಸಚಿವರು, ಇತ್ತೀಚೆಗೆ ಮಂಡ್ಯ ಜಿಲ್ಲೆಯ ಚೀರನಹಳ್ಳಿ ಗ್ರಾಮದ ಪ್ರವೀಣ್ ಎಂಬ ಯುವಕ ಚಿರತೆ ದಾಳಿಯಿಂದ ಮೃತಪಟ್ಟಿರುವ ಘಟನೆ ಅತ್ಯಂತ ದುಃಖಕರವಾಗಿದೆ ಎಂದು ಹೇಳಿದರು.
ಹೀಗಾಗಿ ಭಕ್ತರು ಬಸ್ ಹಾಗೂ ಕಾರುಗಳಲ್ಲಿ ತೆರಳಿ ಮಾದಪ್ಪನ ದರ್ಶನ ಪಡೆಯುವಂತೆ ಮನವೊಲಿಸಲು ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನೊಳಗೊಂಡ ತಂಡ ರಚಿಸಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿಗೆ ಟಿಪ್ಪಣಿ ಕಳುಹಿಸಿರುವುದಾಗಿ ಸಚಿವರು ಮಾಹಿತಿ ನೀಡಿದರು.



