ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್ ಫೋನ್ ಬಳಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪ್ರಜ್ವಲ್ ರೇವಣ್ಣ ಅವರನ್ನು 42ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಬಾಡಿ ವಾರೆಂಟ್ ಆಧಾರದ ಮೇಲೆ ಪ್ರಜ್ವಲ್ ರೇವಣ್ಣ ಅವರನ್ನು ಪೊಲೀಸ್ ಕಸ್ಟಡಿಗೆ ಪಡೆಯಲು ಪೊಲೀಸರು ನ್ಯಾಯಾಲಯದಲ್ಲಿ ಮನವಿ ಮಾಡಿದರು.
ಈ ಪ್ರಕರಣದಲ್ಲಿ ಪ್ರತಾಪ್ ಎ1 ಆರೋಪಿಯಾಗಿದ್ದು, ಪ್ರಜ್ವಲ್ ರೇವಣ್ಣ ಎ2 ಆರೋಪಿಯಾಗಿದ್ದಾರೆ. ಪ್ರಕರಣದ ತನಿಖೆಗೆ ಅಗತ್ಯವಿರುವ ಹಿನ್ನೆಲೆಯಲ್ಲಿ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಹಾಗೂ ಪ್ರತಾಪ್ ಅವರನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲು ಅನುಮತಿ ನೀಡುವಂತೆ ಪೊಲೀಸರು ಕೋರ್ಟ್‌ಗೆ ಮನವಿ ಮಾಡಿದ್ದರು.
ಪೊಲೀಸರ ಮನವಿಯನ್ನು ಪರಿಗಣಿಸಿದ 42ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ಸಂದೀಪ್ ಪಾಟೀಲ್ ಅವರು ಪ್ರಜ್ವಲ್ ರೇವಣ್ಣ ಅವರನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದ್ದಾರೆ.
ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಇಂದಿನಿಂದಲೇ ಪೊಲೀಸರು ಪ್ರಜ್ವಲ್ ರೇವಣ್ಣ ಅವರನ್ನು ವಶಕ್ಕೆ ಪಡೆದು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲಿದ್ದಾರೆ.



