ಬೆಳಗಾವಿ: ಬೆಳಗಾವಿ ಜಿಲ್ಲೆಯ ಹಿರಿಯ ರಾಜಕೀಯ ನಾಯಕ, ಮಾಜಿ ಸಚಿವ ಹಾಗೂ ಮಾಜಿ ಸಂಸದ ಶಿವಾನಂದ ಕೌಜಲಗಿ (87) ಅವರು ಶುಕ್ರವಾರ ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಬೈಲಹೊಂಗಲದ ತಮ್ಮ ಸ್ವಗೃಹದಲ್ಲಿ ಅವರು ಕೊನೆಯುಸಿರೆಳೆದಿದ್ದು, ಅವರ ಅಗಲಿಕೆಯಿಂದ ಉತ್ತರ ಕರ್ನಾಟಕದ ರಾಜಕೀಯ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಶೋಕ ಆವರಿಸಿದೆ.
ತಂದೆಯ ನಿಧನದಿಂದ ತೀವ್ರ ದುಃಖಿತರಾಗಿರುವ ಬೈಲಹೊಂಗಲ ಕ್ಷೇತ್ರದ ಹಾಲಿ ಶಾಸಕ ಮಹಾಂತೇಶ ಕೌಜಲಗಿ ಅವರು ಸಾಮಾಜಿಕ ಜಾಲತಾಣದಲ್ಲಿ ಭಾವುಕ ಸಂದೇಶ ಹಂಚಿಕೊಂಡು ಸಂತಾಪ ಸೂಚಿಸಿದ್ದಾರೆ.
ಮೂರು ಬಾರಿ ಶಾಸಕರಾಗಿ, ಸಂಸದರಾಗಿ ಸೇವೆ:
ಶಿವಾನಂದ ಕೌಜಲಗಿ ಅವರು ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಸುದೀರ್ಘ ಅನುಭವ ಹೊಂದಿದ್ದ ನಾಯಕರಾಗಿದ್ದರು. ಬೈಲಹೊಂಗಲ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅವರು, 1996ರಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು. ರಾಜ್ಯ ಸರ್ಕಾರದಲ್ಲಿ ಲೋಕೋಪಯೋಗಿ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು. ಉತ್ತರ ಕರ್ನಾಟಕ ಭಾಗದಲ್ಲಿ ರಸ್ತೆ ಮತ್ತು ಸೇತುವೆಗಳ ಅಭಿವೃದ್ಧಿಗೆ ಶ್ರಮಿಸಿದ್ದರು.
ಕೆಎಲ್ಇ ಸಂಸ್ಥೆಯ ಅಭಿವೃದ್ಧಿಗೆ ಕೊಡುಗೆ:
ರಾಜಕೀಯದ ಜೊತೆಗೆ ಶಿಕ್ಷಣ ಕ್ಷೇತ್ರದಲ್ಲೂ ಕೌಜಲಗಿ ಅವರು ಮಹತ್ವದ ಸೇವೆ ಸಲ್ಲಿಸಿದ್ದರು. ಪ್ರತಿಷ್ಠಿತ ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷರಾಗಿ ಹಾಗೂ ಅಧ್ಯಕ್ಷರಾಗಿ ಜವಾಬ್ದಾರಿ ನಿರ್ವಹಿಸಿದ್ದರು. ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳಿಗೆ ಗುಣಮಟ್ಟದ ಉನ್ನತ ಶಿಕ್ಷಣ ಮತ್ತು ವೈದ್ಯಕೀಯ ಸೌಲಭ್ಯಗಳು ದೊರೆಯುವಂತೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಅ. 31ರಂದು ಅನಿಗೋಳದಲ್ಲಿ ಅಂತ್ಯಕ್ರಿಯೆ:
ಶಿವಾನಂದ ಕೌಜಲಗಿ ಅವರ ಅಂತ್ಯಕ್ರಿಯೆ ಅಕ್ಟೋಬರ್ 31ರಂದು ಬೆಳಿಗ್ಗೆ 11 ಗಂಟೆಗೆ ಅವರ ಸ್ವಗ್ರಾಮ ಅನಿಗೋಳದ ರುದ್ರಭೂಮಿಯಲ್ಲಿ ವೀರಶೈವ ಲಿಂಗಾಯತ ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಬೈಲಹೊಂಗಲದ ಸ್ವಗೃಹದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.
ಮುಖ್ಯಮಂತ್ರಿಗಳು, ಸಚಿವರು, ಶಾಸಕರು, ವಿವಿಧ ರಾಜಕೀಯ ಪಕ್ಷಗಳ ನಾಯಕರು ಹಾಗೂ ಕೆಎಲ್ಇ ಸಂಸ್ಥೆಯ ಪದಾಧಿಕಾರಿಗಳು ಶಿವಾನಂದ ಕೌಜಲಗಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.









