ಬೆಂಗಳೂರು: ಸುಪ್ರೀಂ ಕೋರ್ಟ್ನ ಮಾಜಿ ನ್ಯಾಯಮೂರ್ತಿಗೆ ಬೆಂಗಳೂರು ಸೈಬರ್ ಸೆಲ್ ಅಧಿಕಾರಿಗಳ ಸೋಗಿನಲ್ಲಿ ಕರೆ ಮಾಡಿ ಬೆದರಿಸಲು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಸುಪ್ರೀಂ ಕೋರ್ಟ್ ಮಾಜಿ ನ್ಯಾಯಮೂರ್ತಿಯಾದ ಜೆ. ಚೆಲಮೇಶ್ವರ್ ಅವರಿಗೆ ಅಪರಿಚಿತರು ಕರೆ ಮಾಡಿ ತಾವು ಬೆಂಗಳೂರಿನ ಸೈಬರ್ ಸೆಲ್ ಅಧಿಕಾರಿಗಳೆಂದು ಪರಿಚಯಿಸಿಕೊಂಡು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.
ಈ ಕುರಿತು ಸುಪ್ರೀಂ ಕೋರ್ಟ್ ಪ್ರಧಾನ ಕಾರ್ಯದರ್ಶಿ ಭರತ್ ಪರಾಶರ್ ದೂರು ನೀಡಿದ್ದು, ಅವರ ದೂರಿನ ಅನ್ವಯ ಬೆಂಗಳೂರು ಸೈಬರ್ ಕ್ರೈಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಜನವರಿ 9ರಂದು ನಡೆದ ಈ ಘಟನೆಗೆ ಸಂಬಂಧಿಸಿ ಅಪರಿಚಿತ ವ್ಯಕ್ತಿಗಳ ವಿರುದ್ಧ ತನಿಖೆ ಆರಂಭಿಸಲಾಗಿದೆ. ಕರೆ ಮಾಡಿದವರ ಪತ್ತೆಗಾಗಿ ತಾಂತ್ರಿಕ ಮಾಹಿತಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.



