ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರ ಬೆನ್ನಲ್ಲೇ ಹಲವು ಜಿಲ್ಲೆಗಳಿಗೆ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ರಾಯಚೂರು, ಯಾದಗಿರಿ, ಕಲಬುರಗಿ ಹಾಗೂ ಬೀದರ್ ಜಿಲ್ಲೆಗಳಿಗೆ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದ 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಮುಂದಿನ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಇರಲಿದೆ ಎಂದು ಇಲಾಖೆ ತಿಳಿಸಿದೆ.
ಇನ್ನು ವಿಜಯಪುರ, ಬಾಗಲಕೋಟೆ, ಕೊಪ್ಪಳ ಹಾಗೂ ಗದಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಮೇ 22ರಂದು ಬೀದರ್, ಕಲಬುರಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮುಂದುವರಿಯಲಿದ್ದು, 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮೇ 23ರಂದು ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಜಾರಿಯಲ್ಲಿರಲಿದ್ದು, ಬೆಂಗಳೂರು ಸೇರಿದಂತೆ ದಕ್ಷಿಣ ಹಾಗೂ ಉತ್ತರ ಒಳನಾಡಿನ 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.



