ಮೈಸೂರು: ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕೀರನಹಳ್ಳಿ ಗೇಟ್ ಬಳಿ ಇಂದು ನಸುಕಿನ ಜಾವ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಸ್ಲೀಪರ್ ಬಸ್ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ನಾಲ್ವರು ಮೃತಪಟ್ಟಿದ್ದಾರೆ. 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಮೈಸೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಸ್ಲೀಪರ್ ಬಸ್ಗೆ, ಮಡಿಕೇರಿ ಕಡೆಯಿಂದ ಮೈಸೂರು ಕಡೆಗೆ ಬರುತ್ತಿದ್ದ ಲಾರಿ ಡಿಕ್ಕಿಯಾಗಿದೆ. ಡಿಕ್ಕಿಯ ತೀವ್ರತೆಗೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಅಪಘಾತದಲ್ಲಿ ಗಾಯಗೊಂಡವರನ್ನು ಪಿರಿಯಾಪಟ್ಟಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣವೇನು ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.



