ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ ಆಧುನಿಕ ತಂತ್ರಜ್ಞಾನದ ಬಳಕೆಯಲ್ಲಿ ನಮ್ಮ ರಾಜ್ಯ ಮುಂಚೂಣಿಯಲ್ಲಿದೆ. ಈ ಪಯಣವನ್ನು ಸಂಕೇತಿಸುವಂತೆ, ಸಿರಿಧಾನ್ಯದಿಂದ ಮೈಕ್ರೋಚಿಪ್ವರೆಗೆ (ಮಿಲ್ಲೆಟ್ ಟು ಮೈಕ್ರೋಚಿಪ್) ಎನ್ನುವ ಸ್ತಬ್ಧಚಿತ್ರವನ್ನು 2026ರ ಜನವರಿ 26ರಂದು ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಅಂಗವಾಗಿ ಕೆಂಪು ಕೋಟೆಯಲ್ಲಿ ಆಯೋಜಿಸುವ ಭಾರತ ಪರ್ವದಲ್ಲಿ ಕರ್ನಾಟಕವು ಪ್ರದರ್ಶಿಸುತ್ತಿದೆ.
ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನ ಮತ್ತು ಭಾರತ ಪರ್ವದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟ್ಯಪೂರ್ಣ ಸ್ತಬ್ಧಚಿತ್ರಗಳ ಮೂಲಕವೇ ದೇಶದ ಗಮನ ಸೆಳೆಯುತ್ತಿದ್ದು, ವರ್ಷದಿಂದ ವರ್ಷಕ್ಕೆ ಹೊಸ ಮೈಲಿಗಲ್ಲುಗಳನ್ನು ಸ್ಥಾಪಿಸುತ್ತಲೇ ಸಾಗಿದೆ. ಈ ಬಾರಿ ಕೃಷಿ, ಶಿಕ್ಷಣ, ವಿಜ್ಞಾನ, ಉನ್ನತ ತಂತ್ರಜ್ಞಾನ ಹಾಗೂ ಮೈಕ್ರೋಚಿಪ್ಗಳ ಉತ್ಪಾದನೆಯಲ್ಲಿ ಸಾಧಿಸಿರುವ ಸಮತೋಲನಯುತ ಪ್ರಗತಿಯನ್ನು ಸ್ತಬ್ಧಚಿತ್ರದಲ್ಲಿ ತೋರಿಸಲಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ. ನಿಂಬಾಳ್ಕರ್ ತಿಳಿಸಿದ್ದಾರೆ.
ಸಿರಿಧಾನ್ಯಗಳ ಉತ್ಪಾದನೆ ಮತ್ತು ಪೌಷ್ಟಿಕ ಆಹಾರದ ಬಳಕೆಯನ್ನು ಉತ್ತೇಜಿಸುವಲ್ಲಿ ಕರ್ನಾಟಕವು ದೇಶದ ಪ್ರಮುಖ ರಾಜ್ಯಗಳಲ್ಲಿ ಒಂದಾಗಿದೆ. ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಬೆಂಗಳೂರು ಜಾಗತಿಕವಾಗಿ ಗಮನ ಸೆಳೆದಿದೆ. ಮೈಕ್ರೋಚಿಪ್, ಎಲೆಕ್ಟ್ರಾನಿಕ್ಸ್ ಹಾಗೂ ಸೆಮಿಕಂಡಕ್ಟರ್ ವಲಯಗಳಲ್ಲಿನ ಆವಿಷ್ಕಾರಗಳು ಕರ್ನಾಟಕವನ್ನು ಶ್ರೇಷ್ಠ ತಂತ್ರಜ್ಞಾನ ಕೇಂದ್ರವಾಗಿಸಿದೆ. ಇವೆಲ್ಲವೂ ಈ ಬಾರಿ ಸ್ತಬ್ಧಚಿತ್ರದಲ್ಲಿ ಮೇಳೈಸಿವೆ.
ದೆಹಲಿಯ ಗಣರಾಜ್ಯೋತ್ಸವದ ಸ್ತಬ್ಧಚಿತ್ರದ ವಿಷಯದ ಆಯ್ಕೆ, ವಿನ್ಯಾಸ, ಕೇಂದ್ರ ಸರ್ಕಾರ ರಕ್ಷಣಾ ಸಚಿವಾಲಯದಲ್ಲಿ ಅದರ ಅನುಮೋದನೆ, ನಿರ್ಮಾಣ, ಪಾಲ್ಗೊಳ್ಳುವಿಕೆ ಹೀಗೆ ಎಲ್ಲಾ ಹಂತಗಳಲ್ಲೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯೇ ಸಕ್ರಿಯವಾಗಿ ಪಾಲ್ಗೊಳ್ಳುತ್ತದೆ. ಅಲ್ಲದೆ, ಇಲಾಖೆಯು ಕಳೆದ 16 ವರ್ಷಗಳಿಂದ ನಿರಂತರವಾಗಿ ಗಣರಾಜ್ಯೋತ್ಸವದ ಪಥಸಂಚಲನ ಮತ್ತು ಭಾರತ ಪರ್ವದ ಪ್ರದರ್ಶನದಲ್ಲಿ (2024 ಮತ್ತು 2026ರಲ್ಲಿ) ಪಾಲ್ಗೊಳ್ಳುತ್ತಿದೆ.
ಈ ಬಾರಿ ಮೊದಲ ಸಭೆಯಲ್ಲಿಯೇ ಸಿರಿಧಾನ್ಯದಿಂದ ಮೈಕ್ರೋಚಿಪ್ವರೆಗೆ ಎಂಬ ವಿಷಯವನ್ನು ಸಮಿತಿಯು ಅಂತಿಮಗೊಳಿಸಿದ್ದು, ಅದಕ್ಕನುಗುಣವಾಗಿ ಮಣ್ಣಿನಲ್ಲಿ ಸಿರಿಧಾನ್ಯಗಳನ್ನು ಬೆಳೆಸಿದ ದೇಶೀಯ ಜ್ಞಾನದಿಂದ ಮೈಕ್ರೋಚಿಪ್ಗಳನ್ನು ಉತ್ಪಾದಿಸುವ ಸೂಕ್ಷ್ಮತೆಯನ್ನು ಈ ಸ್ತಬ್ಧಚಿತ್ರ ಮನಮುಟ್ಟುವಂತೆ ಕಟ್ಟಿಕೊಡುತ್ತದೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿಗಳಾದ ಬಿ.ಬಿ. ಕಾವೇರಿ ಅವರ ಸಲಹೆ-ಸೂಚನೆಗಳು ಸ್ತಬ್ಧಚಿತ್ರದ ಕೆಲಸವನ್ನು ಸುಗಮವಾಗಿಸಿತ್ತು ಎಂದು ವಾರ್ತಾ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.
ಸ್ತಬ್ಧಚಿತ್ರದ ಮುಂಭಾಗದಲ್ಲಿ ಉದಯಿಸುತ್ತಿರುವ ಸೂರ್ಯ, ದೊಡ್ಡ ಮಡಿಕೆಗಳಲ್ಲಿ ವಿವಿಧ ಸಿರಿಧಾನ್ಯಗಳು, ಫಸಲನ್ನು ಎತ್ತಿಹಿಡಿದಿರುವ ರೈತ, ಮಧ್ಯ ಭಾಗದಲ್ಲಿ ತಿರುಗುತ್ತಿರುವ ಅಣುವಿನ ಮಾಲಿಕ್ಯೂಲ್ಗಳ ಮಾದರಿ ತಂತ್ರಜ್ಞಾನ ಪ್ರಗತಿಯನ್ನು ಸೂಚಿಸುತ್ತದೆ. ಇಕ್ಕೆಲಗಳಲ್ಲಿ ಬಾಹ್ಯಾಕಾಶ ಕ್ಷೇತ್ರವನ್ನು ಪ್ರತಿನಿಧಿಸುವ ರಾಕೆಟ್ ಮತ್ತು ವಿಜ್ಞಾನಿ, ಟೆಲಿಮೆಡಿಸಿನ್ ಮೂಲಕ ಮಾರ್ಗದರ್ಶನ ನೀಡುತ್ತಿರುವ ವೈದ್ಯೆ ಹಾಗೂ ಕೃಷಿಭೂಮಿಯಲ್ಲಿ ಡ್ರೋನ್ ಬಳಸುತ್ತಿರುವ ಮಹಿಳೆಯು ವಿಜ್ಞಾನ, ಆರೋಗ್ಯ ಮತ್ತು ಆಧುನಿಕ ಕೃಷಿಯ ಸಮನ್ವಯವನ್ನು ತೋರಿಸುತ್ತದೆ. ಇಡೀ ಸ್ತಬ್ಧಚಿತ್ರದ ಆಕರ್ಷಣೆಯ ಕೇಂದ್ರಬಿಂದುವಾಗಿ ಕೊನೆಯಲ್ಲಿ ಮಿನುಗುತ್ತಿರುವ ಮೈಕ್ರೋಚಿಪ್ ಹಾಗೂ ಬಂಗಾರದ ಬಣ್ಣದ ಸರ್ಕ್ಯೂಟ್ಗಳ ಮಧ್ಯೆ ರೋಬೋಟ್ನ ಮುಖವನ್ನು ಸಾಂಕೇತಿಕವಾಗಿ ಚಿತ್ರಿಸಲಾಗಿದೆ.
ಸ್ತಬ್ಧಚಿತ್ರಕ್ಕಾಗಿ ಪ್ರಶಸ್ತಿ ಪಡೆದುಕೊಳ್ಳುವುದಕ್ಕಿಂತಲೂ ಪಥಸಂಚಲನ ಮತ್ತು ಪ್ರದರ್ಶನದಲ್ಲಿ ಭಾಗವಹಿಸುವುದೇ ಪ್ರತಿಷ್ಠೆಯ ಸಂಕೇತವಾಗಿದೆ. ಇಂತಹ ಕಠಿಣ ಪರೀಕ್ಷೆಯಲ್ಲಿ ಕರ್ನಾಟಕವು 16 ಬಾರಿ ಭಾಗವಹಿಸಿ, ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ. ಒಂದೇ ಸ್ತಬ್ಧಚಿತ್ರಕ್ಕಾಗಿ ಮೂರು ಪ್ರಶಸ್ತಿಗಳನ್ನು ಪಡೆದ ಅಪರೂಪದ ಸಾಧನೆಯನ್ನು ನಮ್ಮ ರಾಜ್ಯವು ಮಾಡಿದೆ ಎನ್ನುವುದು ಹೆಮ್ಮೆಯ ಸಂಗತಿ ಎಂದು ಹೇಮಂತ್ ಎಂ. ನಿಂಬಾಳ್ಕರ್ ತಿಳಿಸಿದ್ದಾರೆ.



