ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಜಲಜೀವನ್ ಮಿಷನ್ ಯೋಜನೆಯಡಿ ತಾಲೂಕಿನ ಗೋಜನೂರು, ಬಟ್ಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂದ್ರಳ್ಳಿ, ಶಿಗ್ಲಿ, ದೊಡ್ಡೂರು ಗ್ರಾ.ಪಂ ವ್ಯಾಪ್ತಿಯ ಶ್ಯಾಬಳ, ದೊಡ್ಡೂರು ತಾಂಡ ಗ್ರಾಮಗಳಿಗೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್ ಭೇಟಿ ನೀಡಿ ಜೆಜೆಎಂ ಕಾಮಗಾರಿ ವೀಕ್ಷಣೆ ಮಾಡಿದರು.
ಈ ವೇಳೆ ಜೆಜೆಎಂ ಯೋಜನೆಯಡಿ ಮನೆ ಮನೆಗೆ ಸಂಪರ್ಕಿಸುವ ನೀರು ಸರಬರಾಜು ವ್ಯವಸ್ಥೆಯನ್ನು ಪರಿಶೀಲಿಸಿ ನೀರಿನ ಸಂಪರ್ಕ ಕಡಿತಗೊಂಡಿರುವ ಗ್ರಾಮಗಳಲ್ಲಿ ಪುನಃ ನೀರಿನ ವ್ಯವಸ್ಥೆಯನ್ನು ಕಲ್ಪಿಸುವಂತೆ ಜೆಜೆಎಂ ಸರಬರಾಜುದಾರರಿಗೆ ಸೂಚಿಸಿದರು. ಶಿಗ್ಲಿ ಸರ್ಕಾರಿ ಹೆಣ್ಣು ಮಕ್ಕಳ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ಕುಡಿಯುವ ನೀರು, ಊಟದ ವ್ಯವಸ್ಥೆ ಪರಿಶೀಲಿಸಿ ಶಾಲೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಎಲ್ಲಾ ಗ್ರಾಮಗಳಲ್ಲಿಯ ಗ್ರಾಮಸ್ಥರೊಂದಿಗೆ ಮಾತನಾಡಿ, ಮೂಲಭೂತ ಸೌಕರ್ಯಗಳ ಕುರಿತು ಮಾಹಿತಿ ಪಡೆದರು. ಈ ವೇಳೆ ಕಾರ್ಯನಿರ್ವಾಹಕ ಅಧಿಕಾರಿಗಳಾದ ಧರ್ಮರ ಕೃಷ್ಣಪ್ಪ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಮಲ್ಲಿಕಾರ್ಜುನ್, ಪಿಡಿಓ ಶಿವಕುಮಾರ್ ವಾಲಿ, ಎಸ್.ಎಫ್. ಮಾಳವಾಡ, ಎಂ. ಮಾದರ್, ಕಾರ್ಯದರ್ಶಿ ಕವಿತಾ ಅಣ್ಣಿಗೇರಿ, ಟಿಐಇಸಿ ಮಂಜುನಾಥ ಸ್ವಾಮಿ, ಟಿಎಎ ಶ್ರೀನಿವಾಸ್ ಕಲಾಲ್, ಶ್ರೀಧರ ಕುಲಕರ್ಣಿ, ಆರ್‌ಡಬ್ಲುಎಸ್ ಅಧಿಕಾರಿಗಳು, ಗ್ರಾ.ಪಂ ಅಧ್ಯಕ್ಷರು, ಸದಸ್ಯರು, ಗ್ರಾ.ಪಂ ಸಿಬ್ಬಂದಿಗಳು ಉಪಸ್ಥಿತರಿದ್ದರು.