ವಿಜಯಸಾಕ್ಷಿ ಸುದ್ದಿ, ಗದಗ: 16ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಚುನಾವಣಾ ಕಾರ್ಯದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದಕ್ಕಾಗಿ ಗದಗ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್ ಅವರು ರಾಜ್ಯ ಮಟ್ಟದ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಬೆಳಗಾವಿ ವಿಭಾಗ ಮಟ್ಟದಲ್ಲಿ ಅತ್ಯುತ್ತಮ ಸಹಾಯಕ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಕ್ಕಾಗಿ ಇವರನ್ನು ಆಯ್ಕೆ ಮಾಡಲಾಗಿದ್ದು, ರವಿವಾರ ಬೆಂಗಳೂರಿನ ಪುಟ್ಟಣ್ಣ ಚೆಟ್ಟಿ ಸಭಾಂಗಣದಲ್ಲಿ ಜರುಗಿದ ವಿಶೇಷ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರಚಂದ್ ಗೆಹಲೋಟ್ ಅವರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.
ಡಾ. ದುರಗೇಶ್ ಕೆ.ಆರ್ ಅವರು ತಮ್ಮ ಸೇವಾವಧಿಯಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಪಾರದರ್ಶಕವಾಗಿ, ಶಿಸ್ತಿನಿಂದ ಹಾಗೂ ಯಶಸ್ವಿಯಾಗಿ ನಿರ್ವಹಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ಮತದಾರರ ಜಾಗೃತಿ, ಶಾಂತಿಯುತ ಚುನಾವಣೆ ಹಾಗೂ ಸುಸೂತ್ರ ನಿರ್ವಹಣೆಗೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಚುನಾವಣಾ ಆಯೋಗವು ಈ ಗೌರವ ನೀಡಿದೆ. ಗದಗ ಜಿಲ್ಲೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ ದೊರೆತಿರುವುದು ಜಿಲ್ಲೆಯ ಆಡಳಿತಕ್ಕೆ ಮತ್ತೊಂದು ಹೆಮ್ಮೆಯ ಕ್ಷಣವಾಗಿದ್ದು, ಸಾರ್ವಜನಿಕ ವಲಯದಲ್ಲಿ ಹರ್ಷ ವ್ಯಕ್ತವಾಗಿದೆ.



