ಗದಗ: ಮತದಾರರ ವಿಶೇಷ ಸಮಗ್ರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಕಾರ್ಯದ ವೇಳೆ ಬಿಎಲ್ಒ ಅಸ್ವಸ್ಥಗೊಂಡ ಘಟನೆ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಸುಗ್ನಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಸುಗ್ನಹಳ್ಳಿ ಗ್ರಾಮದ ಮತಗಟ್ಟೆ ಸಂಖ್ಯೆ 174ರಲ್ಲಿ ಬಿಎಲ್ಒ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಸುಧಾ ಹೇಮಗಿರಿಮಠ ಅವರು ಬೆಳಿಗ್ಗೆ ಮನೆ ಮನೆಗೆ ತೆರಳಿ ಎನ್ಯುಮರೇಷನ್ ಫಾರ್ಮ್ಗಳನ್ನು ಸಂಗ್ರಹಿಸುವ ಸಂದರ್ಭದಲ್ಲಿ ಏಕಾಏಕಿ ಅಸ್ವಸ್ಥಗೊಂಡರು.
ತಕ್ಷಣ ಅವರನ್ನು ಬೆಳ್ಳಟ್ಟಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ವೈದ್ಯರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಶಿರಹಟ್ಟಿ ಕಂದಾಯ ನಿರೀಕ್ಷಕ ಬಸವರಾಜ ಕಾತ್ರಾಳ ಆಸ್ಪತ್ರೆಗೆ ಭೇಟಿ ನೀಡಿ ಬಿಎಲ್ಒ ಅವರ ಆರೋಗ್ಯ ವಿಚಾರಿಸಿ, ಅಗತ್ಯ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.



