ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಕ್ಷೇತ್ರದ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಡಾ. ಎಚ್.ಕೆ. ಪಾಟೀಲ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ನೀಡದ ಹಿನ್ನೆಲೆಯಲ್ಲಿ ಗದಗದಲ್ಲಿ ಕಾಂಗ್ರೆಸ್ನೊಳಗಿನ ಅಸಮಾಧಾನ ಭುಗಿಲೆದ್ದಿದೆ. ಗದಗ-ಬೆಟಗೇರಿ ನಗರಸಭೆಯ 17 ಚುನಾಯಿತ ಕಾಂಗ್ರೆಸ್ ಸದಸ್ಯರು ಹಾಗೂ 5 ನಾಮನಿರ್ದೇಶಿತ ಸದಸ್ಯರು ಸೇರಿ ಒಟ್ಟು 22 ಸದಸ್ಯರು ತಮ್ಮ ಸ್ಥಾನಕ್ಕೆ ಸಾಮೂಹಿಕ ರಾಜೀನಾಮೆ ನೀಡಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರಿಗೆ ಸಲ್ಲಿಸುವ ಮೂಲಕ ರಾಜ್ಯ ಕಾಂಗ್ರೆಸ್ ನಾಯಕತ್ವದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ರಾಜೀನಾಮೆ ಸಲ್ಲಿಸಿದ ಬಳಿಕ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ಸದಸ್ಯರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹಾಗೂ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು. ಹಿರಿಯ ನಾಯಕ ಡಾ. ಎಚ್.ಕೆ. ಪಾಟೀಲ ಅವರಿಗೆ ಸಚಿವ ಸ್ಥಾನ ನೀಡಲೇಬೇಕು ಎಂದು ಒತ್ತಾಯಿಸಿದರು.
ಕೆಲ ನಗರಸಭೆ ಸದಸ್ಯರು ಮಾತನಾಡಿ, ನಾಲ್ಕು ಬಾರಿ ವಿಧಾನ ಪರಿಷತ್ ಸದಸ್ಯರಾಗಿ, ಮೂರು ಬಾರಿ ಶಾಸಕರಾಗಿ, ಸಚಿವರಾಗಿ ಹಾಗೂ ರಾಜ್ಯ ರಾಜಕಾರಣದಲ್ಲಿ ಅನುಭವಿ ನಾಯಕರಾಗಿ ಸೇವೆ ಸಲ್ಲಿಸಿರುವ ಎಚ್.ಕೆ. ಪಾಟೀಲ ಅವರ ಅನುಭವವನ್ನು ಸಂಪುಟದಲ್ಲಿ ಬಳಸಿಕೊಳ್ಳದೇ ಇರುವುದು ಗದಗ ಜಿಲ್ಲೆಗೆ ಮಾತ್ರವಲ್ಲ, ಉತ್ತರ ಕರ್ನಾಟಕಕ್ಕೂ ಮಾಡಿದ ಅನ್ಯಾಯವಾಗಿದೆ ಎಂದು ಆರೋಪಿಸಿದರು.
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹ
ಪ್ರತಿ ಬಾರಿ ಉತ್ತರ ಕರ್ನಾಟಕ ಭಾಗವನ್ನು ಕಡೆಗಣಿಸಲಾಗುತ್ತಿದೆ. ಉತ್ತರ ಕರ್ನಾಟಕದ ಪ್ರಭಾವಿ ಹಾಗೂ ಅನುಭವಿ ನಾಯಕರಿಗೆ ಸಚಿವ ಸಂಪುಟದಲ್ಲಿ ಅವಕಾಶ ನಿರಾಕರಿಸುವ ಮೂಲಕ ಈ ಭಾಗದ ಜನರ ಭಾವನೆಗಳಿಗೆ ಧಕ್ಕೆ ಉಂಟಾಗಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಘೋಷಿಸಿ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು ಎಂದು ಸದಸ್ಯರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಕೃಷ್ಣಾ ಪರಾಪೂರ, ಸುರೇಶ ಕಟ್ಟಿಮನಿ, ಬರಕತ್ ಅಲಿ ಮುಲ್ಲಾ, ರವಿ ಕಮತರ, ಚಂದ್ರು ಕರಿಸೋಮನಗೌಡ್ರ, ಇಮ್ತಿಯಾಜ ಶಿರಹಟ್ಟಿ, ಪದ್ಮಾ ಕಟಗಿ, ಪರವೀನಬಾನು ಮುಲ್ಲಾ, ಶಕುಂತಲಾ ಅಕ್ಕಿ, ಜೈನುದ್ದೀನ್ ನಮಾಜಿ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
ಹಳೇ ಡಿಸಿ ಕಚೇರಿ ವೃತ್ತದಲ್ಲಿ ಬೃಹತ್ ಪ್ರತಿಭಟನೆ
ಎಚ್.ಕೆ. ಪಾಟೀಲ ಅವರಿಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ನಗರದ ಹಳೇ ಜಿಲ್ಲಾಧಿಕಾರಿ ಕಚೇರಿ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಮಾನವ ಸರಪಳಿ ನಿರ್ಮಿಸಿ ಕೆಲಕಾಲ ವಾಹನ ಸಂಚಾರ ಸ್ಥಗಿತಗೊಳಿಸಿದ ಪ್ರತಿಭಟನಾಕಾರರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಹಿರಿಯ ನಾಯಕ ಎಚ್.ಕೆ. ಪಾಟೀಲ ಅವರಿಗೆ ಸಚಿವ ಸ್ಥಾನ ನೀಡಿ ನ್ಯಾಯ ಒದಗಿಸುವಂತೆ ಒತ್ತಾಯಿಸಿದರು.



