ಗದಗ: ಜಿಲ್ಲೆಯ ಶಿರಹಟ್ಟಿ ತಾಲೂಕಿನ ಜಲ್ಲಿಗೇರಿ ಗ್ರಾಮದಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ತಲೆದೋರಿದ್ದು, ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೇಸಿಗೆ ಪೂರ್ಣ ಪ್ರಮಾಣದಲ್ಲಿ ಆರಂಭವಾಗುವ ಮುನ್ನವೇ ಗ್ರಾಮೀಣ ಭಾಗದಲ್ಲಿ ನೀರಿಗಾಗಿ ಪರದಾಟ ಆರಂಭವಾಗಿದೆ.
ಕಡಕೋಳ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಜಲ್ಲಿಗೇರಿ ಗ್ರಾಮದಲ್ಲಿ ಕಳೆದ 15 ದಿನಗಳಿಂದ ಕುಡಿಯುವ ನೀರು ಪೂರೈಕೆ ಆಗದೆ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮನೆಮಂದಿ ದೂರದ ಬಾವಿ ಹಾಗೂ ಬೋರವೆಲ್ಗಳ ಬಳಿ ನೀರಿಗಾಗಿ ಸಾಲಿನಲ್ಲಿ ನಿಂತು ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ನೀರಿನ ಸಮಸ್ಯೆ ಕುರಿತು ಹಲವಾರು ಬಾರಿ ಗ್ರಾಮ ಪಂಚಾಯತಿ ಹಾಗೂ ಪಿಡಿಓ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂಬ ಆರೋಪ ಕೇಳಿಬಂದಿದೆ. ಸದಸ್ಯರ ಆಡಳಿತ ಅವಧಿ ಮುಗಿದ ನಂತರ ಅಧಿಕಾರಿಗಳ ನಿರ್ಲಕ್ಷ್ಯ ಹೆಚ್ಚಾಗಿದೆ ಎಂದು ಗ್ರಾಮಸ್ಥರು ಕಿಡಿಕಾರಿದ್ದಾರೆ.
ಸಮಸ್ಯೆಗೆ ತಕ್ಷಣ ಪರಿಹಾರ ಕಲ್ಪಿಸಬೇಕೆಂದು ಆಗ್ರಹಿಸಿ ಗ್ರಾಮಸ್ಥರು ಗ್ರಾಮ ಪಂಚಾಯತಿ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು. “ನಮಗೆ ನೀರು ಬೇಕು” ಎಂದು ಭಜನೆ ಹಾಡುತ್ತ ಆಕ್ರೋಶ ವ್ಯಕ್ತಪಡಿಸಿದರು. ಅಧಿಕಾರಿಗಳ ಡೋಂಟ್ ಕೇರ್ ಧೋರಣೆಗೆ ಬೇಸತ್ತ ಜನರು ತುರ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಎಂಬುದು ಗ್ರಾಮಸ್ಥರ ಆಗ್ರಹವಾಗಿದೆ.



