ಗದಗ: ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬುಧವಾರ ಬೆಳಿಗ್ಗೆ ಪೊಲೀಸರು ರೌಡಿಶೀಟರ್‌ಗಳ ಮನೆಗಳ ಮೇಲೆ ಏಕಕಾಲಕ್ಕೆ ತಪಾಸಣೆ ನಡೆಸಿ, ಒಟ್ಟು 43 ರೌಡಿಶೀಟರ್‌ಗಳನ್ನು ಪರಿಶೀಲನೆಗೆ ಒಳಪಡಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ನಿರ್ದೇಶನದಂತೆ ನಡೆದ ವಿಶೇಷ ಕಾರ್ಯಾಚರಣೆಯಲ್ಲಿ ಬೆಟಗೇರಿ ಬಡಾವಣೆ, ಗದಗ ಶಹರ ಹಾಗೂ ಗ್ರಾಮೀಣ ಪೊಲೀಸ್ ಠಾಣೆಗಳ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ರೌಡಿಶೀಟರ್‌ಗಳ ಇತ್ತೀಚಿನ ಚಟುವಟಿಕೆಗಳು, ಸಂಪರ್ಕಗಳು ಹಾಗೂ ಕಾನೂನುಬಾಹಿರ ಚಟುವಟಿಕೆಗಳ ಕುರಿತು ಮಾಹಿತಿ ಸಂಗ್ರಹಿಸಲಾಯಿತು.
ಸಮಾಜದಲ್ಲಿ ಶಾಂತಿ ಕದಡುವ ಅಥವಾ ಅಪರಾಧ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಜಿಲ್ಲೆಯಾದ್ಯಂತ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಂತಹ ವಿಶೇಷ ಕಾರ್ಯಾಚರಣೆಗಳು ಮುಂದುವರಿಯಲಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ತಿಳಿಸಿದ್ದಾರೆ.



