ಗದಗ: ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ದಕ್ಷತೆ, ಅಪರಾಧ ನಿಯಂತ್ರಣದಲ್ಲಿ ಪರಿಣಾಮಕಾರಿ ಕಾರ್ಯಾಚರಣೆ, ಜನಸ್ನೇಹಿ ಪೊಲೀಸ್ ವ್ಯವಸ್ಥೆ ಹಾಗೂ ಕರ್ತವ್ಯನಿಷ್ಠ ಸೇವೆಯ ಮೂಲಕ ಗುರುತಿಸಿಕೊಂಡಿರುವ ಗದಗ ಜಿಲ್ಲಾ ಪೊಲೀಸ್ ಇಲಾಖೆಗೆ ರಾಜ್ಯ ಮಟ್ಟದ ಪ್ರತಿಷ್ಠಿತ ಗೌರವ ಲಭಿಸಿದೆ.
ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಹಾಗೂ ಶ್ಲಾಘನೀಯ ಸೇವೆ ಸಲ್ಲಿಸಿದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ನೀಡಲಾಗುವ “ಡಿಜಿ ಮತ್ತು ಐಜಿಪಿ ಪ್ರಶಂಸನಾ ಪದಕ-2025-26”ಕ್ಕೆ ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಸೇರಿದಂತೆ ಜಿಲ್ಲೆಯ ಮೂವರು ಅಧಿಕಾರಿಗಳು ಮತ್ತು ಸಿಬ್ಬಂದಿ ಆಯ್ಕೆಯಾಗಿದ್ದು, ಜಿಲ್ಲೆಯ ಕೀರ್ತಿಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದಿದ್ದಾರೆ.
ರಾಜ್ಯಾದ್ಯಂತ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸುತ್ತಿರುವ 200 ಅಧಿಕಾರಿ ಮತ್ತು ಸಿಬ್ಬಂದಿಯನ್ನು ಈ ಸಾಲಿನ ಪ್ರಶಂಸನಾ ಪದಕಕ್ಕೆ ಆಯ್ಕೆ ಮಾಡಲಾಗಿದೆ. ಮಹಾನಿರ್ದೇಶಕರು ಹಾಗೂ ಪೊಲೀಸ್ ಮಹಾನಿರೀಕ್ಷಕರಾದ ಡಾ. ಎಂ.ಎ. ಸಲೀಂ ಅವರ ಕಚೇರಿಯಿಂದ ಅಧಿಕೃತ ಆದೇಶ ಹೊರಬಿದ್ದಿದ್ದು, ಗದಗ ಜಿಲ್ಲೆಯ ನಾಲ್ವರು ಪೊಲೀಸ್ ಸಿಬ್ಬಂದಿಯ ಹೆಸರುಗಳು ಪಟ್ಟಿಯಲ್ಲಿ ಸ್ಥಾನ ಪಡೆದಿರುವುದು ವಿಶೇಷವಾಗಿದೆ.
ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಖಡಕ್ ನಿರ್ಧಾರ ತೆಗೆದುಕೊಳ್ಳುವ ಎಸ್ಪಿ ರೋಹನ್ ಜಗದೀಶ್ ಅವರಿಗೆ ಈ ಗೌರವ ಲಭಿಸಿರುವುದು ಗದಗ ಪೊಲೀಸ್ ಇಲಾಖೆಯ ಸಾಧನೆಗೆ ದೊರೆತ ಮಹತ್ವದ ಮನ್ನಣೆಯಾಗಿದೆ. ಅಪರಾಧ ತಡೆ, ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಹಾಗೂ ಶಿಸ್ತಿನ ಆಡಳಿತದ ಮೂಲಕ ಅವರು ಜಿಲ್ಲೆಯಲ್ಲಿ ಪರಿಣಾಮಕಾರಿ ಪೊಲೀಸ್ ವ್ಯವಸ್ಥೆ ರೂಪಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅದೇ ರೀತಿ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯ ಪಿಎಸ್ಐ ಮಾರುತಿ ಜೋಗದಂಡಕರ್, ಗದಗ ಗ್ರಾಮೀಣ ಪೊಲೀಸ್ ಠಾಣೆಯ ಎಎಸ್ಐ ವಿಶ್ವನಾಥ್ ಬಡಿಗೇರ್ ಹಾಗೂ ಡಿಎಆರ್ ಗದಗದ ಎಪಿಸಿ-57 ಮಂಜುನಾಥ್ ಬಂಡಿಹಾಳ್ ಅವರುಗಳು ತಮ್ಮ ಕರ್ತವ್ಯ ನಿರ್ವಹಣೆಯಲ್ಲಿ ತೋರಿದ ನಿಷ್ಠೆ, ಪ್ರಾಮಾಣಿಕತೆ ಹಾಗೂ ಸೇವಾ ಮನೋಭಾವಕ್ಕಾಗಿ ಈ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಕರ್ನಾಟಕ ಪೊಲೀಸ್ ಇಲಾಖೆಯ ಅತ್ಯುನ್ನತ ಗೌರವಗಳಲ್ಲಿ ಒಂದೆನಿಸಿರುವ ಡಿಜಿ-ಐಜಿಪಿ ಪ್ರಶಂಸನಾ ಪದಕ ಗದಗ ಜಿಲ್ಲೆಯ ನಾಲ್ವರು ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಲಭಿಸಿರುವುದು ಜಿಲ್ಲೆಯ ಪೊಲೀಸ್ ಇಲಾಖೆಯ ಕಾರ್ಯಕ್ಷಮತೆಗೆ ಸಂದ ರಾಜ್ಯ ಮಟ್ಟದ ಮನ್ನಣೆಯಾಗಿದೆ. ಪದಕ ವಿಜೇತರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು, ಸಹೋದ್ಯೋಗಿಗಳು, ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಹಾಗೂ ಸಾರ್ವಜನಿಕರಿಂದ ಅಭಿನಂದನೆಗಳ ಮಹಾಪೂರ ಹರಿದು ಬರುತ್ತಿದೆ.



