ವಿಜಯಸಾಕ್ಷಿ ಸುದ್ದಿ, ಗದಗ : ರಾಜ್ಯದಲ್ಲಿ ಬಡತನ ನಿರ್ಮೂಲನೆಗಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಯಿತು. ಇದರಿಂದ ಬಡವರ ಬಾಳಲ್ಲಿ ಅಗಾಧವಾದ ಆರ್ಥಿಕ ಸ್ವಾವಲಂಬನೆ ಮೂಡುವುದರೊಂದಿಗೆ ಕ್ರಾಂತಿಕಾರಕ ಬದಲಾವಣೆ ಸಾಧ್ಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಹೇಳಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಗದಗ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಗ್ಯಾರಂಟಿ ಯೋಜನೆಯ ಅನುಷ್ಠಾನದಿಂದ 1.10 ಕೋಟಿ ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲೆತ್ತಲಾಗಿದೆ. ಬಡಜನರಿಗೆ ಆತ್ಮಾಭಿಮಾನ, ಸ್ವಾಭಿಮಾನ ಕುದುರಿಸುವ ಕೆಲಸವಾಗಿದೆ ಎಂದರು.
ಪಂಚಗ್ಯಾರಂಟಿ ಯೋಜನೆಗಳಲ್ಲಿ ಶೇ.100ರಷ್ಟು ಸಾಧನೆಯಾಗಬೇಕು. ಈ ನಿಟ್ಟಿನಲ್ಲಿ ಸಂಬಂಧಿತ ಅಧಿಕಾರಿಗಳು ಸೇವಾ ಮನೋಭಾವದಿಂದ ಯೋಜನೆಯ ಸೌಲಭ್ಯ ಮನೆಮನೆಗೆ ತಲುಪಿಸುವ ಕೆಲಸ ಮಾಡಬೇಕು.
ಯೋಜನೆಗಳ, ಸೌಲಭ್ಯಗಳ ದುರ್ಬಳಕೆಯಾಗದಂತೆ ಎಚ್ಚರಿಕೆ ವಹಿಸಬೇಕು. ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಗದಗ ಜಿಲ್ಲೆ ಮುಂಚೂಣಿಯಲ್ಲಿದ್ದುದು ಸಂತಸದ ವಿಷಯವಾಗಿದೆ. ಅಂತೆಯೇ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿಯೂ ಸಹ ಜಿಲ್ಲೆಯು ಅಗ್ರ ಸ್ಥಾನದಲ್ಲಿರುವಂತೆ ಕ್ರಮ ವಹಿಸಬೇಕು ಎಂದು ಸಚಿವರು ನಿರ್ದೇಶನ ನೀಡಿದರು.
ಗೃಹಜ್ಯೊತಿ ಯೋಜನೆಯಡಿ ಗದಗ ಗ್ರಾಮಿಣ ಉಪವಿಭಾಗದಲ್ಲಿ 52909 ಸ್ಥಾವರಗಳು ಹಾಗೂ ಶಹರ ವಿಭಾಗದಲ್ಲಿ 45024 ಸ್ಥಾವರಗಳ ನೋಂದಣಿ ಮೂಲಕ ಶೇ. 92.9 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಹೆಸ್ಕಾಂ ಅಧಿಕಾರಿಗಳು ಸಭೆಗೆ ತಿಳಿಸಿದರು.
ಗೃಹಲಕ್ಷ್ಮಿ ಯೋಜನೆಯಡಿ ಗದಗ ತಾಲೂಕಿನ ಯಜಮಾನಿ ಕಾರ್ಡ್ ಹೊಂದಿರುವವರ ಸಂಖ್ಯೆ ಒಟ್ಟು 78009 ಇದ್ದು, ಆ ಪೈಕಿ 77611 ಫಲಾನುಭವಿಗಳ ನೋಂದಣಿಯಾಗಿದೆ. 76291 ಫಲಾನುಭವಿಗಳಿಗೆ ಡಿಬಿಟಿ ಮೂಲಕ ಖಾತೆಗೆ ನೇರ ಪಾವತಿಸಲಾಗುತ್ತಿದೆ. ಎನ್‌ಪಿಸಿಐ ವಿಫಲ ವರದಿ (ಜಿಎಸ್‌ಟಿ/ ಐಟಿ) ತೊಂದರೆಗಳಿಂದ 1320 ಅರ್ಜಿಗಳು ಬಾಕಿ ಉಳಿದಿವೆ ಎಂದು ಗದಗ ಸಿಡಿಪಿಒ ಹುಲಿಗೆಮ್ಮ ಜೋಗೇರ ಸಭೆಗೆ ಮಾಹಿತಿ ಒದಗಿಸಿದರು.
ಅನ್ನಭಾಗ್ಯ ಯೋಜನೆಯಡಿ ಡಿಬಿಟಿ ಮೂಲಕ ನಗದು ವರ್ಗಾವಣೆಯನ್ನು ಜುಲೈ-2023ರಿಂದ ಆರಂಭಿಸಲಾಯಿತು. ಪ್ರತಿ ಸದಸ್ಯರಿಗೆ ಹೆಚ್ಚುವರಿ 5 ಕೆಜಿ ಅಕ್ಕಿಯ ಮೊತ್ತ 170ರಂತೆ 6,43,423 ಜನರಿಗೆ ಜುಲೈ-2023ರಲ್ಲಿ ಪಾವತಿಸಲಾಯಿತು. ನಂತರ ನಿರಂತರವಾಗಿ ಪ್ರತಿ ತಿಂಗಳು ಪಾವತಿಸಲಾಗುತ್ತಿದೆ. ಜೂನ್ 2024ರಲ್ಲಿ 7,59,604 ಸದಸ್ಯರಿಗೆ ಡಿಬಿಟಿ ಮುಲಕ ಹೆಚ್ಚುವರಿ ಅಕ್ಕಿಯ ಮೊತ್ತವನ್ನು ಪಾವತಿಸಲಾಗಿದೆ ಎಮದು ಮಾಹಿತಿ ನೀಡಿದರು.
ಶಕ್ತಿ ಯೋಜನೆಯಿಂದ ವಾ.ಕ.ರಾ.ಸಂಸ್ಥೆಯ ಗದಗ ವಿಭಾಗಕ್ಕೆ ಸೆಪ್ಟೆಂಬರ್ 2024ರವರೆಗೆ 65,46,66,516 ರೂ. ಆದಾಯ ಬಂದಿದೆ. ಒಟ್ಟಾರೆ ಮಹಿಳಾ ಫಲಾನುಭವಿಗಳಿಂದ 36,78,23,531 ಆದಾಯವಾಗಿದೆ ಎಂದು ಸಭೆಗೆ ತಿಳಿಸಿದರು.
2022-23 ನೇ ಶೈಕ್ಷಣಿಕ ಸಾಲಿನಲ್ಲಿ ಅಧ್ಯಯನ ಮಾಡಿ 2023ರಲ್ಲಿ ತೇರ್ಗಡೆಯಾದ ದಿನಾಂಕದಿಂದ 180 ದಿನ ಕಳೆದರೂ ಉದ್ಯೊಗ ಲಭಿಸದ ಪದವೀಧರ ನಿರುದ್ಯೋಗಿಗಲಿಗೆ ಪ್ರತಿ ತಿಂಗಳು 3 ಸಾವಿರ ರೂ ನಿರುದ್ಯೋಗ ಭತ್ಯೆ ಹಾಗೂ ಡಿಪ್ಲೊಮಾ ಪಾಸಾದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 1,500 ರೂ ನಿರುದ್ಯೋಗ ಭತ್ಯೆ ನೀಡಲಾಗುತ್ತದೆ.
ಯುವನಿಧಿ ಯೋಜನೆಯಡಿ ಇದುವರೆಗೆ 1171 ಅಭ್ಯರ್ಥಿಗಳ ನೋಂದಣಿಯಾಗಿದೆ ಎಂದು ಸಭೆಗೆ ತಿಳಿಸಿದರು.
ಸಭೆಯಲ್ಲಿ ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕಬರಸಾಬ ಬಬರ್ಜಿ, ಗದಗ ಜಿಲ್ಲಾ ಮಟ್ಟದ ಗ್ಯಾರಂಟಿ ಸಮಿತಿ ಅಧ್ಯಕ್ಷ ಬಿ.ಬಿ. ಅಸೂಟಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಗ್ಯಾರಂಟಿ ಸಮಿತಿಯ ಸದಸ್ಯರುಗಳಾದ ಶಂಭು ಎಸ್.ಕಾಳೆ, ಮೀನಾಕ್ಷಿ ಬೆನಕಣ್ನವರ, ದಯಾನಂದ ಪವಾರ, ಸಂಗು ಕರಕಲಕಟ್ಟಿ, ನಿಂಗಪ್ಪ ದೇಸಾಯಿ, ಸಂಗಮೇಶ ಹಾದಿಮನಿ, ರಮೇಶ ಹೊನ್ನಿನಾಯಕರ, ದೇವರೆಡ್ಡಿ ತಿರ್ಲಾಪುರ, ಮಲ್ಲಪ್ಪ ದಂಡಿನ, ಗಣೇಶ ಸಿಂಗ್ ಮಿಟಾಡ್, ಮಲ್ಲಪ್ಪ ಬಾರಕೇರ, ಬಾಷಾ ಮಲ್ಲಸಮುದ್ರ, ಕೃಷ್ಣಗೌಡ ಎಚ್.ಪಾಟಿಲ, ಸಾವಿತ್ರಿ ಹೂಗಾರ ಸೇರಿದಂತೆ ಗ್ಯಾರಂಟಿ ಯೋಜನೆಯ ಸಂಬAಧಿತ ಅಧಿಕಾರಿಗಳು ಹಾಜರಿದ್ದರು.
ಅರ್ಹರಿಗೆ ಗ್ಯಾರಂಟಿ ಯೋಜನೆಗಳ ಸೌಲಭ್ಯ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕಾರ್ಯನಿರ್ವಹಿಸಬೇಕು. ದೇಶದಲ್ಲಿಯೇ ಮೊಟ್ಟ ಮೊದಲ ಬಾರಿಗೆ ರಾಜ್ಯ ಸರ್ಕಾರ 50 ಸಾವಿರ ಕೋಟಿ ರೂ.ಗಳ ಯೋಜನೆಯನ್ನು ಭ್ರಷ್ಟಾಚಾರವಿಲ್ಲದೇ ಜನರಿಗೆ ತಲುಪಿಸುವ ಕೆಲಸ ಮಾಡಿದೆ. ಇದು ಸರ್ಕಾರದ ಮಹತ್ಸಾಧನೆಯಾಗಿದೆ ಎಂದು ಹೇಳಿದರು.
– ಎಚ್.ಕೆ. ಪಾಟೀಲ.
ಜಿಲ್ಲಾ ಉಸ್ತುವಾರಿ ಸಚಿವರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಗದಗ ತಾಲೂಕು ಮಟ್ಟದ ಗ್ಯಾರಂಟಿ ಯೋಜನಾ ಸಮಿತಿಯ ಅಧ್ಯಕ್ಷರಾದ ಅಶೋಕ ಮಂದಾಲಿ ಮಾತನಾಡಿ, ರಾಜ್ಯ ಸರ್ಕಾರ ಬಡಜನರ ಶ್ರೇಯೋಭಿವೃದ್ಧಿಗೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರತಿ ಕುಟುಂಬಕ್ಕೆ ಪ್ರತಿ ತಿಂಗಳಿಗೆ 5 ಸಾವಿರ ರೂ.ಗಳಂತೆ ವಾರ್ಷಿಕ 60 ಸಾವಿರ ರೂ. ಅರ್ಹ ಫಲಾನುಭವಿಯ ಖಾತೆ ನೇರವಾಗಿ ಜಮಾ ಮಾಡುವ ಉದ್ದೇಶ ಈ ಯೋಜನೆಯದ್ದಾಗಿದೆ. ಜಿಲ್ಲೆಯಲ್ಲಿ ಪ್ರಥಮ ತಾಲುಕಾ ಮಟ್ಟದ ಗ್ಯಾರಂಟಿ ಪ್ರಗತಿ ಪರಿಶೀಲನಾ ಸಮಿತಿ ಸಭೆ ನಡೆಸಲಾಗುತ್ತಿದೆ. ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಗದಗ ವಿಧಾನಸಭಾ ಕ್ಷೇತ್ರವನ್ನು ರಾಜ್ಯದಲ್ಲಿಯೇ ಪ್ರಥಮ ಸ್ಥಾನಕ್ಕೆ ತರಲು ಎಲ್ಲರೂ ಶ್ರಮಿಸೋಣ ಎಂದರು.