ಗದಗ:- ಸರ್ಕಾರಿ ಬಸ್ ಹರಿದು ಮಹಿಳೆಯೋರ್ವರು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಬಸ್ ನಿಲ್ದಾಣದಲ್ಲಿ ಜರುಗಿದೆ.
ಚೆನ್ನಮ್ಮ ಹಡಪದ (48) ಮೃತ ದುರ್ದೈವಿ. ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಕಡಕೋಳ ಗ್ರಾಮದ ನಿವಾಸಿ.
ಇಂದು ತಮ್ಮೂರಿಗೆ ಹೋಗಲು ಬಸ್ ನಿಲ್ದಾಣದಲ್ಲಿ ನಿಂತಿದ್ದ ವೇಳೆ ಸವಣೂರು ಕಡೆಗೆ ಹೋಗುವ ಬಸ್ ಕಾಲಿನ ಮೇಲೆ ಹರಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದರು.
ಕೂಡಲೇ ಗಾಯಾಳು ಮಹಿಳೆಯನ್ನು ಲಕ್ಷ್ಮೇಶ್ವರ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಯಿತು. ಗಾಯದ ತೀವ್ರತೆ ಹೆಚ್ಚಿದ್ದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಗದಗ ಜಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವನ್ನಪ್ಪಿದ್ದಾರೆ.
ಲಕ್ಷ್ಮೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.



